ರಾಯಚೂರು: ಹವಾಮಾನ ವೈಪರೀತ್ಯದಿಂದಾಗಿ ಮುಂದಿನ ಮೂರು ದಿನಗಳಲ್ಲಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇದ್ದುಕೊಂಡು ಅಗತ್ಯ ಮುನ್ನೆಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ದುರಗೇಶ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಡಿಸಿ ಕಚೇರಿಯ ಸಭಾಂಗಣದಲ್ಲಿ ಭಾರಿ ಮಳೆಯ ಮುನ್ನೆಚ್ಚರಿಕೆ ಕುರಿತು ತುರ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಹಾಗೂ ರಾಜ್ಯ ಹವಾಮಾನ ಇಲಾಖೆಯ ಅಧಿಕಾರಿಗಳ ಸೂಚನೆಯಂತೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉತ್ತರ ಕರ್ನಾಟದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಎಚ್ಚರಿಕೆ ವಹಿಸುವಂತೆ ಈಗಾಗಲೇ ಎಲ್ಲ ಜಿಲ್ಲೆಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.
ಜಿಲ್ಲೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಮಳೆಯಿಂದ ಸಂಭವಿಸುವ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು, ಅಧಿಕಾರಿಗಳು ಯಾವುದೇ ಕೇಂದ್ರ ಸ್ಥಾನ ತೊರೆಯದೆ ಜಿಲ್ಲೆಯಲ್ಲಿದೆ ಕಾರ್ಯನಿರ್ವಹಿಸಬೇಕು. ಜಲಾಶಯಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಒಳಹರಿವು ನೀರು ಹರಿದು ಬರುವ ಸಾಧ್ಯತೆ ಇರುವುದರಿಂದ ನದಿ ಹಾಗೂ ಹಳ್ಳದ ದಡಿ ಹತ್ತಿರ ಜನರು ಹಾಗೂ ಜಾನುವಾರುಗಳು ಹೋಗದಂತೆ ಡಂಗುರದ ಎಚ್ಚರಿಕೆ ನೀಡಬೇಕು. ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಮಳೆಯಿಂದ ಯಾವುದೇ ಅನಾಹುತ ಸಂಭವಿಸಿದಲ್ಲಿ ಅಧಿಕಾರಿಗಳು ತಕ್ಷಣವೇ ಕಾರ್ಯ ಪೃವೃತ್ತರಾಗಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆಯ ಬಸನಗೌಡ ಪಾಟೀಲ, ಜೆಸ್ಕಾಂ ಇಇ ಚಂದ್ರಶೇಖರ್ ದೇಸಾಯಿ, ಡಾ.ಶಿವಣ್ಣ, ಖಾಸಿಂ ಸಾಬ್, ವೀರನಗೌಡ, ನಗರಸಭೆ ಪೌರಾಯುಕ್ತ ದೇವಾನಂದ ದೊಡ್ಡಮನಿ, ರಾಜೇಶ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.