ರಾಯಚೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿ ನಿಗೂಢ ಸಾವಿನ ಪ್ರಕರಣಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳು ಇಂದು ಬೃಹತ್ ಪ್ರತಿಭಟನೆ ನಡೆಸಿದವು.
ನಗರದ ಮಾಣಿಕ್ಯ ಪ್ರಭು ದೇವಾಲಯದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಗೆ ವಿಶ್ವಕರ್ಮ ಸಮಾಜ ಮತ್ತು ನಾನಾ ಸಂಘಟನೆಗಳು, ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದರ ಜೊತೆಗೆ ನಗರದ ಸರಾಫ್ ಬಜಾರ್ನ ಕೆಲ ಅಂಗಡಿ ಮುಂಗಟ್ಟುಗಳ ಮಾಲೀಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡುವ ಮೂಲಕ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದು, ಮುಂಜಾಗ್ರತ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.