ರಾಯಚೂರು: ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೆಡ್ ಕಾನ್ಸ್‌ಟೇಬಲ್ ಒಬ್ಬರು ಇಂದು ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ.
ಗ್ರಾಮೀಣ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 45 ವರ್ಷದ ಪೊಲೀಸ್ ಕಾನ್ಸ್‌ಟೇಬಲ್ ಗೆ ಕೆಲ ದಿನಗಳ ಹಿಂದೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ, ಅವರ ಗಂಟಲು ದ್ರವವನ್ನು ಪರೀಕ್ಷಿಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹಾಗಾಗಿ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಇನ್ನು ಮೃತ ಹೆಡ್ ಕಾನ್ಸ್‌ಟೇಬಲ್ ಕೆಲ ವರ್ಷಗಳ ಹಿಂದಿನಿಂದಲೂ ಹೃದಯ ಸಂಬಂಧಿ ಸಮಸ್ಯೆ ಎದುರಿಸುತ್ತಿದ್ದರು. ಇವರ ಸಾವಿಗೆ ಪೊಲೀಸ್ ಇಲಾಖೆ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ.