ರಾಯಚೂರು: ಜಿಟಿ ಜಿಟಿ ಮಳೆಯ ನಡುವೆ ರಾಯಚೂರು ಜಿಲ್ಲೆಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ನಗರ ಜಿಲ್ಲಾ ಪೊಲೀಸ್ ಕಚೇರಿಯ ಆವರಣದಲ್ಲಿ ಡಿ.ಆರ್.ಮೈದಾನದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಷ್ಟ್ರಧ್ವಜಾರೋಹಣ ನೆರವೇರಿಸುವ ಮೂಲಕ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಧ್ವಜಾರೋಹಣದ ಬಳಿಕ ತೆರೆದ ವಾಹನದಲ್ಲಿ ಧ್ವಜವಂದನೆ ಸ್ವೀಕರಿಸಿ, ಬಳಿಕ ಪೊಲೀಸ್ ಇಲಾಖೆ, ಅಗ್ನಿಶಾಮಕ, ಅರಣ್ಯ ಇಲಾಖೆಯ ಸಿಬ್ಬಂದಿಯ ಆಕರ್ಷಕ ಪಂಥಸಂಚನ ಮಳೆ ನಡುವೆಯೂ ನಡೆಯಿತು.
ಬಳಿಕ ಸ್ವಾತಂತ್ರ್ಯ ದಿನಾಚರಣೆಗೆ ನಾಡಿನ ಜನತೆಗೆ ಶುಭಕೋರಿ, ಸರ್ಕಾರದ ಅಭಿವೃದ್ಧಿ ಯೋಜನೆಗಳ ಕುರಿತಾಗಿ ಮಳೆ ನಡುವೆ ಮಾತನಾಡಿದ ಲಕ್ಷ್ಮಣ ಸವದಿ, ಕೊರೊನಾ ವಾರಿಯರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಆರೋಗ್ಯ ಇಲಾಖೆ, ಪೌರ ಕಾರ್ಮಿಕರು, ಪೊಲೀಸ್ ಸಿಬ್ಬಂದಿ ಸೇರಿದಂತೆ ಇತರೆ ಕೋವಿಡ್ ವಾರಿಯರ್ಸ್ಗೆ ಸನ್ಮಾನಿಸಲಾಯಿತು.
ಕೊರೊನಾ ಭೀತಿ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಂದ ಪಂಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮ ರದ್ದುಗೊಳಿಸಿ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಇನ್ನು ಕಳೆದ ಮೂರು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಡಿ.ಆರ್.ಮೈದಾನದಲ್ಲಿ ಮಳೆ ನೀರು ನಿಂತಿತ್ತು. ಹಿಂದೆಲ್ಲ ಸ್ವಾತಂತ್ರ್ಯ ದಿನಾಚರಣೆ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುತ್ತಿದ್ದರು, ಆದ್ರೆ ಕೊರೊನಾ ಭೀತಿ, ಮಳೆಯಿಂದ ಕಡಿಮೆ ಸಂಖ್ಯೆಯ ಸಾರ್ವಜನಿಕರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಸಂಸದರಾದ ರಾಜಾ ಅಮರೇಶ್ವರ ನಾಯಕ, ಅಶೋಕ್ ಗಸ್ತಿ, ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್, ಜಿ.ಪಂ. ಸಿಇಒ ಲಕ್ಷ್ಮೀಕಾಂತ್ ರೆಡ್ಡಿ, ಎಸ್ಪಿ ನಿಕ್ಕಂ ಪ್ರಕಾಶ್ ಅಮೃತ್, ಸಹಾಯಕ ಆಯುಕ್ತ ಸಂತೋಷ ಕಾಮಗೌಡ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿಬಾಬು ಸೇರಿದಂತೆ ಹಲವರು ಭಾಗವಹಿಸಿದ್ರು.