ರಾಯಚೂರು: ಜಿಲ್ಲಾ ಉಸ್ತುವಾರಿ ಸಚಿವರು ಮುಂದಿನ ಹದಿನೈದು ದಿನಗಳೊಳಗೆ ಜಿಲ್ಲೆಯ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸದೆ ಹೋದರೆ, ಜನತೆಯ ಪರವಾಗಿ ಸೀರೆ, ಬಳೆಗಳನ್ನು ಉಡುಗೊರೆಯಾಗಿ ನೀಡುತ್ತೇವೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ವಿರೂಪಾಕ್ಷಿ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ತಿಂಗಳು, ಸೆ.17 ರಂದು ಕಲ್ಯಾಣ ಕರ್ನಾಟಕ ದಿನಾಚರಣೆ ಸಮಯದಲ್ಲಿ ನಗರಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಗರ ಶಾಸಕರಿಗೆ ಹದಿನೈದು ದಿನಗಳ ಗಡುವು ನೀಡಿ ನಗರಕ್ಕೆ ಮೂಲ ಸೌಲಭ್ಯಗಳನ್ನು ಒದಗಿಸದಿದ್ದರೆ ಬಳೆ ಹಾಗೂ ಸೀರೆಯನ್ನು ನೀಡುವುದಾಗಿ ಹೇಳಿದ್ದೆವು. ಆದರೆ ಇಲ್ಲಿಯವರೆಗೂ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳು ಕೈಗೊಳ್ಳದ ಹಿನ್ನೆಲೆ ಮುಂದಿನ ದಿನಗಳಲ್ಲಿ ನಗರಕ್ಕೆ ಆಗಮಿಸುವ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರಿಗೆ ಬಳೆ ಸೀರೆ ಉಡುಗೊರೆ ಕೊಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಶಾಸಕ ಶಿವರಾಜ್ ಪಾಟೀಲ್, ನಗರದ ಅಭಿವೃದ್ಧಿಗೆ ನೂರಾರು ಕೋಟಿ ಅನುದಾನ ತಂದಿರುವುದಾಗಿ ಹೇಳಿಕೆ ನೀಡುತ್ತಿದ್ದು, ನಗರದ ಕೆಲ ವಾರ್ಡ್ಗಳಲ್ಲಿ ಮಾತ್ರ ಕಾಮಗಾರಿ ನಡೆಯುತ್ತಿದೆ. ಅಲ್ಲದೇ, ಗುತ್ತಿಗೆ ಕೆಲಸಗಳು ಕೇವಲ ಶಾಸಕರ ಸಂಬಂಧಿಕರಿಗೆ ಮಾತ್ರ ನೀಡಲಾಗುತ್ತಿದ್ದು, ಕಾಮಗಾರಿಗಳಿಗೆ ಕಮಿಷನ್ ಪಡೆಯುತ್ತಿದ್ದಾರೆ ಎಂದು ಆರೋಪಿಸಿದರು.
ಅಲ್ಪಸಂಖ್ಯಾತರು ಹೆಚ್ಚಿರುವ ಬಡಾವಣೆಯಲ್ಲಿ ಅಭಿವೃದ್ಧಿ ಕಾಮಗಾರಿಗಳು ಹೇಳಿಕೆಗೆ ಸೀಮಿತವಾಗಿವೆ. ನಗರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಕುರಿತು ನಗರ ಶಾಸಕರು ಶ್ವೇತ ಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು.
ಕಳೆದ ಏಳು ವರ್ಷಗಳಲ್ಲಿ ವಿವಿಧ ಇಲಾಖೆಯಲ್ಲಿ ಯಾವ ಯಾವ ಕಾಮಗಾರಿಗಳಿಗೆ ಎಷ್ಟು ಅನುದಾನ ನಿಗದಿ ಪಡಿಸಿದ್ದಾರೆ, ಎಷ್ಟು ಪ್ರಗತಿಯಲ್ಲಿದೆ ಎಂಬುದರ ಕುರಿತು ನಾವು ದಾಖಲೆ ಬಿಡುಗಡೆ ಮಾಡಿದ್ದೇವೆ. ಇದರ ಕುರಿತು ಬಹಿರಂಗ ಚರ್ಚೆಗೆ ಬಂದಲ್ಲಿ ನಾವು ಸಿದ್ದರಿದ್ದೇವೆ ಎಂದು ಸವಾಲು ಹಾಕಿದರು.