ರಾಯಚೂರು: ವಿದ್ಯಾರ್ಥಿ ಜೀವನದಲ್ಲಿ ಒಳ್ಳೆಯ ವಿಚಾರಗಳನ್ನು ಮಾತ್ರ ಆಯ್ಕೆ ಮಾಡಿಕೊಂಡು, ಓದುವ ಸಮಯದಲ್ಲಿ ಗುರಿಯ ಕಡೆಗೆ ಗಮನವಿಟ್ಟು ಮುನ್ನೆಡೆದಲ್ಲಿ ಮಾತ್ರ ಯಶಸ್ಸು ಸಾಧಿಸಲು ಸಾಧ್ಯವೆಂದು ಅಪರ ಜಿಲ್ಲಾಧಿಕಾರಿ ದುರುಗೇಶ ಕಿವಿಮಾತು ಹೇಳಿದರು.
ನಗರದ ರಂಗಮಂದಿರದಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಸಿಬ್ಬಂದಿ ಮಕ್ಕಳಿಗೆ ಶೈಕ್ಷಣಿಕ ಕ್ಷೇತ್ರದ ಆಯ್ಕೆ, ಸ್ಫೂರ್ತಿ, ಪ್ರೇರಣೆ ಮತ್ತು ಉಜ್ವಲ ಭವಿಷ್ಯಕ್ಕಾಗಿ ಒಂದು ದಿನದ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು. ಎಲ್ಲಾ ಕಡೆಯಿಂದ ಉತ್ತಮ ವಿಚಾರಗಳು ಬರಲು ಸಾಧ್ಯವಿಲ್ಲ. ಆದ್ರೆ ಉತ್ತಮ ವಿಚಾರಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿ ಹಂತ ಹಂತವಾಗಿ ಸಾಧನೆ ಮಾಡಿದರೆ ಮಾತ್ರ ಯಶಸ್ಸು ಕಾಣಲು ಸಾಧ್ಯ. ಪ್ರಶಸ್ತಿಗಳ ಹಿಂದೆ ಹೊಗದೆ ನಾವು ಮಾಡುವ ಕೆಲಸವೇ ಸಾಧನೆಯಾಗಬೇಕು ಎಂದರು.
ಗ್ರಾಮೀಣ ಪ್ರದೇಶದ ಮಕ್ಕಳು ನಗರ ಪ್ರದೇಶದ ಮಕ್ಕಳಿಗಿಂತ ಉತ್ತಮ ಸಾಧನೆ ಮಾಡುತ್ತಿದ್ದು, ಅವರಿಗೆ ಉತ್ತಮ ಮಾರ್ಗದಶನದ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟರು. ಇದೇ ವೇಳೆ ಸಾಧನೆಗೈದ ಸಂಸ್ಥೆಯ ಸಿಬ್ಬಂದಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.