ರಾಯಚೂರು: ಹದಗೆಟ್ಟ ರಸ್ತೆಗಳ ದುರಸ್ತಿ ಬಗ್ಗೆ ಪ್ರಧಾನಿ ಕಚೇರಿಯಿಂದ ರಾಯಚೂರು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತರ್ತು ರಸ್ತೆ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿ ಪತ್ರ ಬರೆಯಲಾಗಿದೆ.
ಜಿಲ್ಲೆಯಲ್ಲಿ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ. ಜಿಲ್ಲಾಡಳಿತ ಕಚೇರಿಯ ಕೂಗಳೆತೆಯಲ್ಲಿರುವ ಕುಕನೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ತಿರುಗಾಡಲು ಕೂಡ ಪ್ರಯಾಣಿಕರು ಜೀವ ಕೈಯಲ್ಲಿ ಹಿಡಿದುಕೊಂಡು ಸಾಗಬೇಕಾದ ಪರಿಸ್ಥಿತಿಯಿದೆ.
2001-2002ನೇ ಸಾಲಿನಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ನಿರ್ಮಿಸಿದ ರಸ್ತೆಯನ್ನ ಇನ್ನೂ ದುರಸ್ತಿ ಮಾಡಿಲ್ಲ. ಅಲ್ಲದೆ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆಯಲ್ಲಿ ಗುಂಡಿಗಳು ಬಿದ್ದಿವೆ. ದುರಸ್ತಿ ಮಾಡುವಂತೆ ಸ್ಥಳೀಯ ಆಡಳಿತಕ್ಕೆ ಮನವಿ ಸಲ್ಲಿಸಿದರೂ ಉಪಯೋಗವಾಗಿರಲಿಲ್ಲ. ಅದಕ್ಕಾಗಿ ರಾಜಶೇಖರ ಪಾಟೀಲ್ ಎಂಬುವರ ಜತೆಗೆ ಗ್ರಾಮಸ್ಥರೆಲ್ಲ ಸೇರಿ ಜಿಲ್ಲಾಧಿಕಾರಿಗೆ ಮತ್ತು ಇ-ತಂತ್ರಾಂಶದ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಿದ್ದರು.
ಸದ್ಯ ಕುಕನೂರು ಗ್ರಾಮಸ್ಥರ ಮನವಿಗೆ ಸ್ಪಂದಿಸಿರುವ ಪ್ರಧಾನಿ ಕಚೇರಿ, ರಾಯಚೂರು ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕರಿಗಳಿಗೆ ತುರ್ತು ಕ್ರಮಕೈಗೊಳ್ಳುವಂತೆ ಪತ್ರ ಬರೆದು ಸೂಚಿಸಿದೆ. ಇನ್ನು, ಜನರ ಮನವಿಗೆ ಸ್ಪಂದಿಸದ ಜಿಲ್ಲಾಡಳಿತ ಪ್ರಧಾನಿ ಕಚೇರಿಯ ಪತ್ರಕ್ಕೆ ಹೇಗೆ ಸ್ಪಂದಿಸುತ್ತೋ ಅಂತಾ ಕಾದು ನೋಡಬೇಕಿದೆ.