ರಾಯಚೂರು: ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಹಗಲುಗನಸು ಕಾಣುತ್ತಿದ್ದಾರೆ ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ವ್ಯಂಗ್ಯವಾಡಿದ್ದಾರೆ. ಜಿಲ್ಲೆಯ ಸಿಂಧನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಹೇಳಿಕೆಗೆ ತಿರುಗೇಟು ನೀಡಿದರು.
'6 ತಿಂಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳುತ್ತದೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದರು. ಇದಕ್ಕೆ ನಾನು ಏನು ಹೇಳಬೇಕು ಎಂದು ಅರ್ಥವಾಗುತ್ತಿಲ್ಲ. ಹಗಲುಗನಸು ಅಂತಾ ಒಂದು ಇರುತ್ತದೆ. ಅದನ್ನು ಶಾಸಕ ಬಸನಗೌಡ ಯತ್ನಾಳ್ ಕಾಣುತ್ತಿದ್ದಾರೆ ಎಂದು ಸಚಿವ ಪಾಟೀಲ್ ಕಟುಕಿದರು.
ಕಾಂಗ್ರೆಸ್ ಶಾಸಕರ ಬಗ್ಗೆ ಸಿ.ಟಿ ರವಿ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಪಾಪ ರವಿಯವರಿಗೆ ಸಂಘದೋಷ. ಶೇ.40ರಷ್ಟು ಲಂಚ ತೆಗೆದುಕೊಂಡು ಹೀಗೆ ಆಗಿದೆ. ಕಾಮಾಲೆ ಆದವರಿಗೆ ಎಲ್ಲವೂ ಹಳದಿ ಅನ್ನಿಸುತ್ತೆ ಅಲ್ವಾ?, ಎಂದು ಟಾಂಗ್ ಕೊಟ್ಟರು.
ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕುಮಾರಸ್ವಾಮಿ ಅವರು ಅಸಂಬಂಧಿತ ಹೇಳಿಕೆ ನೀಡುತ್ತಾರೆ. ಅವರ ಸರ್ಕಾರದ ಆಡಳಿತ ಬಗ್ಗೆ ನಾನು ಏನು ಹೇಳಬೇಕಾಗಿಲ್ಲ. ಈ ಹಿಂದೆ ನಮ್ಮ ಜೊತೆಗೆ ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ ಆಗಿದ್ದರು. ಕಾಂಗ್ರೆಸ್ನಿಂದಲೇ ಹೆಚ್ಡಿಕೆ ಸಿಎಂ ಆಗಿದ್ದವರು. ಸರ್ಕಾರ ಉಳಿಸಿಕೊಳ್ಳಲು ಆಗಲಿಲ್ಲ ಎಂಬ ಹತಾಶ ಭಾವನೆ ಅವರಿಗಿದೆ ಎಂದು ವ್ಯಂಗ್ಯವಾಡಿದರು.
ಇದನ್ನೂ ಓದಿ: ಶಕ್ತಿ ಯೋಜನೆ ಅನುಷ್ಠಾನದಿಂದ ಸಾರಿಗೆ ಇಲಾಖೆಗೆ ನಷ್ಟ ಆಗುವುದಿಲ್ಲ: ಸಚಿವ ಶರಣಪ್ರಕಾಶ್ ಪಾಟೀಲ್
ಇತ್ತೀಚೆಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಏಮ್ಸ್ ಸ್ಥಾಪನೆಗೆ ಕಲಬುರಗಿ ಹಾಗೂ ರಾಯಚೂರು ಜಿಲ್ಲೆಯ ಹೆಸರನ್ನು ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವನಾಗಿ ಹೇಳುತ್ತಿದ್ದೇನೆ. ಏಮ್ಸ್ ಅನ್ನು ರಾಯಚೂರು ಜಿಲ್ಲೆಗೆ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ. ಏಮ್ಸ್ ಸ್ಥಾಪನೆಗೆ ರಾಯಚೂರು ಜಿಲ್ಲೆಯ ಹೆಸರನ್ನು ಮಾತ್ರ ಶಿಫಾರಸು ಮಾಡಲಾಗಿದ್ದು, ಮುಖ್ಯಮಂತ್ರಿಗಳು ಕೂಡ ಕೇಂದ್ರಕ್ಕೆ ಬರೆದ ಪತ್ರದಲ್ಲಿ ರಾಯಚೂರು ಜೆಲ್ಲೆಯ ಹೆಸರನ್ನು ಮಾತ್ರ ಶಿಫಾರಸು ಮಾಡಿದ್ದಾರೆ. ಕೂಡಲೇ ಕೇಂದ್ರಕ್ಕೆ ನಿಯೋಗ ತೆರಳಿ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಮಾಡಲು ಕೇಂದ್ರದ ಮೇಲೆ ಒತ್ತಡ ಹೇರಲಾಗುವುದು ಎಂದು ತಿಳಿಸಿದರು.
ಪಾರದರ್ಶಕ ಆಡಳಿತ: ಇನ್ನು ಗ್ಯಾರಂಟಿ ಯೋಜನೆಗಳು ಸರ್ಕಾರದ ಮೊದಲ ಆದ್ಯತೆ. ಆಯಾ ಇಲಾಖೆಯ ಕಾರ್ಯಕ್ರಮಗಳನ್ನು ಸುಲಲಿತವಾಗಿ ನಡೆಸಿಕೊಂಡು ಹೋಗಲಾಗುತ್ತದೆ. ಪಾರದರ್ಶಕ ಆಡಳಿತ ಹಾಗೂ ಭ್ರಷ್ಟಾಚಾರ ರಹಿತ ಸರ್ಕಾರವನ್ನು ನಡೆಸಲಾಗುತ್ತದೆ ಎಂದು ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದರು.
ಇದನ್ನೂ ಓದಿ: ಕೇಂದ್ರ ಆರೋಗ್ಯ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ.. ರಾಯಚೂರಲ್ಲಿ ಏಮ್ಸ್ ಸ್ಥಾಪನೆ ಹೋರಾಟಕ್ಕೆ ಬಲ