ರಾಯಚೂರು: ನೆರೆ ಹಾವಳಿಯಿಂದ ಹದಗೆಟ್ಟಿರುವ ಜಿಲ್ಲೆಯ ಗ್ರಾಮೀಣ ಭಾಗದ ರಸ್ತೆಗಳನ್ನು ಕೂಡಲೇ ದುರಸ್ತಿಗೊಳಿಸಿ, ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಶಾಸಕ ಬಸನಗೌಡ ದದ್ದಲ್ ಅವರು ಲೋಕೋಪಯೋಗಿ ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿ ನಿಲಯಗಳು ಹದಗೆಟ್ಟಿವೆ. ಸ್ನಾನ ಮತ್ತು ಶೌಚಾಲಯ ಸಮಸ್ಯೆಗಳಿಂದ ಅವರಿಗೆ ತೊಂದರೆಯಾಗುತ್ತಿದೆ. ಸುಧಾರಣೆಯ ಕ್ರಮಗಳ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ತಾಲೂಕಿನ ಹಳ್ಳಿಗಳಲ್ಲಿ ಶಿಥಿಲಗೊಂಡಿರುವ ವಿದ್ಯುತ್ ಕಂಬಗಳನ್ನು ಸರಿಪಡಿಸಿ, ಮುಂದಾಗಲಿರುವ ಅಪಾಯವನ್ನು ತಪ್ಪಿಸಬೇಕು. ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಿರ್ಮಾಣ ಹಂತದಲ್ಲಿರುವ ಆಸ್ಪತ್ರೆಗಳನ್ನು ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಇದೇ ಸಂದರ್ಭದಲ್ಲಿ ಶಾಸಕ ಬಸನಗೌಡ ದದ್ದಲ್ ಅವರು ಸಭೆಯಲ್ಲಿ ಗೈರು ಆಗಿರುವ ಅಧಿಕಾರಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಸೂಚನೆ ನೀಡಿದರು.