ರಾಯಚೂರು: ಕೆಪಿಸಿಸಿ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ವೀಕ್ಷಣೆಗೆ ರಾಜ್ಯದ 7800 ಕಡೆ ವ್ಯವಸ್ಥೆ ಮಾಡಲಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಎನ್.ಎಸ್. ಬೋಸರಾಜ್ ಹೇಳಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ನೂತನ ಅಧ್ಯಕ್ಷರ ಪದಗ್ರಹಣ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಎರಡು ತಿಂಗಳು ಮುಂದೂಡಲಾಗಿತ್ತು. ಬರುವ ಜು.2 ರಂದು ಡಿಜಿಟಲ್ ತಂತ್ರಜ್ಞಾನದ ಮೂಲಕ ಕಾರ್ಯಕ್ರಮ ನಡೆಯುತ್ತಿದ್ದು, ಇದರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಗ್ರಾ.ಪಂ., ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ಸೇರಿದಂತೆ ಜಿಲ್ಲೆಯಾದ್ಯಂತ 215 ಕಡೆ ವೀಕ್ಷಣೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಪಕ್ಷದ ಜಿಲ್ಲಾಧ್ಯಕ್ಷ ಬಿ.ವಿ. ನಾಯಕ ಮಾತನಾಡಿ, ಕಚ್ಚಾ ತೈಲಬೆಲೆ ಇಳಿಕೆಯಾದರೂ, ದಿನದಿಂದ ದಿನಕ್ಕೆ ಪೆಟ್ರೋಲ್ ದರವನ್ನ ಕೇಂದ್ರ ಸರ್ಕಾರ ಏರಿಕೆ ಮಾಡುತ್ತಿದೆ. ಇದರಿಂದ ಜನಸಾಮಾನ್ಯರಿಗೆ ಹೊರೆಯಾಗುತ್ತಿದೆ. ಹೀಗಾಗಿ ಪೆಟ್ರೋಲ್ ಬೆಲೆ ಏರಿಕೆ ನೀತಿಯನ್ನ ಖಂಡಿಸಿ, ನಗರದ ಅಂಬೇಡ್ಕರ್ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕ ಬಸವನಗೌಡ ದದ್ದಲ್, ಮುಖಂಡರಾದ ಜಯಣ್ಣ, ರುಂದ್ರಪ್ಪ ಅಂಗಡಿ, ಅಮರೇಗೌಡ ಹಂಚಿನಾಳ, ಅಬ್ದುಲ್ ಕರೀಂ, ಶಾಂತಪ್ಪ ಸೇರಿದಂತೆ ಇತರರಿದ್ದರು.