ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ದರ್ಶನಕ್ಕೆ ಆಗಮಿಸುವ ವಿದೇಶಿಗರು, ವಿದೇಶದಿಂದ ಭಾರತಕ್ಕೆ ಮರಳಿದ ದೇಶವಾಸಿಗಳು ಕನಿಷ್ಠ 15 ದಿನಗಳ ಕಾಲ ರಾಯರ ಮಠಕ್ಕೆ ಆಗಮಿಸದಂತೆ ಪ್ರಕಟಣೆ ಮೂಲಕ ಮನವಿ ಮಾಡಲಾಗಿದೆ.
ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ಶ್ರೀ ಮಠದಿಂದ ಮುಂಜಾಗೃತ ಕ್ರಮವಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಶ್ರೀ ರಾಘವೇಂದ್ರ ಸ್ವಾಮಿ ದರ್ಶನಕ್ಕೆ ಬರುವ ಭಕ್ತರು ತಮ್ಮ ಜತೆಯಲ್ಲಿ ಮಾಸ್ಕ್, ಸ್ಯಾನಿಟೈಜರ್ ಹಾಗೂ ಸೋಂಕು ಹರಡದಂತೆ ಎಚ್ಚರಿಕೆ ಕ್ರಮ ಅನುಸರಿಸುವಂತೆ ಸೂಚಿಸಲಾಗಿದೆ. ಶ್ರೀಮಠದ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾರ್ಯ ಕೈಗೊಳ್ಳುವ ಜೊತೆಗೆ ಸಿಬ್ಬಂದಿ, ಅಧಿಕಾರಿಗಳು, ವ್ಯಾಪಾರಸ್ಥರಿಗೂ ಕೂಡ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಮಠದ ಆಡಳಿತ ಮಂಡಳಿ ತಿಳಿಸಿದೆ.
ಇನ್ನು, ಸೋಂಕಿನ ಲಕ್ಷಣಗಳಾದ ಕೆಮ್ಮು, ನೆಗಡಿ, ಉಸಿರಾಟದ ತೊಂದರೆ ಕಂಡು ಬಂದಲ್ಲಿ ಭಕ್ತರು ಶ್ರೀಮಠದ ಆಸ್ಪತ್ರೆ ಸಂಪರ್ಕಿಸುವಂತೆ ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಆದೇಶದ ಮೇರೆಗೆ ಮಠದ ವ್ಯವಸ್ಥಾಪಕ ಎಸ್.ಕೆ. ಶ್ರೀನಿವಾಸ್‌ರಾವ್ ಪ್ರಕಟಣೆ ಹೊರಡಿಸಿದ್ದಾರೆ.