ಲಿಂಗಸುಗೂರು: ಗುತ್ತಿಗೆ ನೌಕರರ ನಿರ್ಲಕ್ಷ್ಯ ವಿರೋಧಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು.
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ 200ಕ್ಕೂ ಹೆಚ್ಚು ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದೇವೆ. ಸಮಾನ ದುಡಿತಕ್ಕೆ ಸಮಾನ ವೇತನ ಆಧರಿಸಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟ ನಡೆಸುತ್ತ ಬಂದಿದ್ದರೂ ಕನಿಷ್ಠ ಸೌಲಭ್ಯ ಕಲ್ಪಿಸಲು ಸರ್ಕಾರ ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.
ಕೊರೊನಾ ವಾರಿಯರ್ಸ್ ಆಗಿ ಅಹೋರಾತ್ರಿ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಸೇವಾ ಭದ್ರತೆ ಸಿಗುತ್ತಿಲ್ಲ. ಎಷ್ಟೋ ನೌಕರರು ಕೋವಿಡ್ನಿಂದ ಬಳಲುತ್ತಿದ್ದು, ಕೆಲ ನೌಕರರು ಮೃತಪಟ್ಟಿದ್ದಾರೆ. ಸಂಕಷ್ಟಕ್ಕೆ ಸಿಲುಕಿದ ಕುಟುಂಬಸ್ಥರ ನೆರವಿಗೆ ಸರ್ಕಾರ ಮುಂದಾಗದೇ ನಿರ್ಲಿಪ್ತ ಧೋರಣೆ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ನೀಡುವ ಬಜೆಟ್ ಆಧರಿಸಿ ರಾಜ್ಯ ಸರ್ಕಾರ ಬಜೆಟ್ ಹೆಚ್ಚಿಸಬೇಕು. ಆರೋಗ್ಯ ಭಾಗ್ಯ ಯೋಜನೆ ವಿಸ್ತರಣೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ ಸಲ್ಲಿಸಿ ಬೇಡಿಕೆಗೆ ಸ್ಪಂದಿಸದಿದ್ದರೆ ಅನಿರ್ದಿಷ್ಟ ಮುಷ್ಕರ ನಡೆಸುವ ಎಚ್ಚರಿಕೆ ನೀಡಿದರು.