ರಾಯಚೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆಯಾಗುತ್ತಿದೆ. ಆಮ್ಲಜನಕದ ನಿರ್ವಹಣೆಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ವಿಫಲರಾಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಯ ಮುಖ್ಯ ದ್ವಾರದ ಮುಂದೆ ಪ್ರತಿಭಟನೆ ನಡೆಸಿದರು.
ಜಿಲ್ಲೆಯ 27 ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅದರಲ್ಲಿ 9 ಆಸ್ಪತ್ರೆಗಳು ನಗರದಲ್ಲಿ ಇವೆ. ರೋಗಿಗಳ ಸಂಖ್ಯೆಗೆ ಅನುಗುಣವಾಗಿ ಅವಶ್ಯಕತೆ ಇರುವ ಆಮ್ಲಜನಕ ಪೂರೈಕೆಯಾಗದೆ ರೋಗಿಗಳು ಪರಿತಪಿಸುವಂತಾಗಿದೆ ಎಂದು ಕಾಂಗ್ರೆಸ್ ಮುಖಂಡ ರವಿಬೋಸರಾಜ್ ಆರೋಪಿಸಿದರು.
ಕಳೆದ ರಾತ್ರಿ ನಗರದ ಖಾಸಗಿ ನವೋದಯ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆ ಉಂಟಾಗಿದ್ದು, ಇದೇ ಪರಿಸ್ಥಿತಿ ಬಹುತೇಕ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಇದೆ. ಸಂಘ ಸಂಸ್ಥೆಗಳ ಸಹಾಯದಿಂದ ಕೆಲ ಆಮ್ಲಜನಕ ಸಿಲಿಂಡರ್ ಪೂರೈಕೆ ಮಾಡಿದ್ದು, ಜಿಲ್ಲಾಡಳಿತ ಸರಿಯಾದ ನಿರ್ವಹಣೆ ಮಾಡುವಲ್ಲಿ ವಿಫಲವಾಗಿದೆ. ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಇದ್ದುಕೊಂಡು ಸಕಲ ವ್ಯವಸ್ಥೆ ಮಾಡಬೇಕು ಎಂದು ಸಿಎಂ ಸೂಚಿಸಿದ್ದಾರೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಆಗಮಿಸದೆ ನಿರ್ಲಕ್ಷ್ಯ ಹಾಗೂ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಜಿಲ್ಲೆಯಲ್ಲಿ 6 ಸಾವಿರಕ್ಕೂ ಅಧಿಕ ಸೋಂಕಿತರು ಇದ್ದು, ಪರಿಸ್ಥಿತಿ ಗಂಭೀರವಾಗಿದೆ. ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ವಿಫಲರಾಗಿದ್ದಾರೆ. ಇದರ ಮಧ್ಯ ಭಾರತೀಯ ವೈಜ್ಞಾನಿಕ ಸಂಘ ಖಾಸಗಿ ಆಸ್ಪತ್ರೆಯ ವೈದ್ಯರಿಗೆ ಮೊಬೈಲ್ ಸಂದೇಶದ ಮೂಲಕ ಆಮ್ಲಜನಕದ ಅವಶ್ಯಕತೆ ಇರುವ ಹೊಸ ರೋಗಿಗಳನ್ನು ಭರ್ತಿ ಮಾಡಿಕೊಳ್ಳಬೇಡಿ. ಮುಂದೆ ಅಗುವ ಘಟನೆಗಳಿಗೆ ಸಂಘ ಜವಾಬ್ದಾರಿ ಹೊರುವುದಿಲ್ಲ ಎಂದು ಹೇಳಿದೆ.
ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಂದ ಆಮ್ಲಜನಕ ಪೂರೈಕೆ ಕುರಿತು ಸ್ಪಷ್ಟ ಭರವಸೆ ದೊರೆಯುವವರೆಗೆ ನಮ್ಮ ಪ್ರತಿಭಟನೆ ಮುಂದುವರಿಯಲಿದೆ ಎಂದರು.