ರಾಯಚೂರು: ಕಲುಷಿತ ನೀರು ಕುಡಿದು 25 ಜನ ಅಸ್ವಸ್ಥಗೊಂಡಿರುವ ಮತ್ತೊಂದು ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೊರೆಬಾಳ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ವಾಂತಿ, ಭೇದಿಯಿಂದ ಗೊರೆಬಾಳದಲ್ಲಿ ಮೂವರು ತೀವ್ರ ಅಸ್ವಸ್ಥಗೊಂಡಿದ್ದಾರೆ. ಇವರಿಗೆ ಕಿಡ್ನಿ ಸಮಸ್ಯೆಯೂ ಎದುರಾಗಿದೆ ಎಂದು ತಿಳಿದು ಬಂದಿದೆ.
ಅಸ್ವಸ್ಥರನ್ನು ಲಿಂಗಸುಗೂರಿನ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮದಲ್ಲಿ ಮೆಡಿಕಲ್ ಕ್ಯಾಂಪ್ ಹಾಕಿ ಸ್ಥಳದಲ್ಲಿಯೇ ಬೀಡುಬಿಟ್ಟಿದ್ದಾರೆ. ಕುಡಿಯುವ ನೀರು ಸರಬರಾಜು ಪೈಪ್‌ಗೆ ಚರಂಡಿ ನೀರು ಸೇರಿ ಅವಾಂತರ ಸೃಷ್ಟಿಯಾಗಿದೆ ಎನ್ನಲಾಗುತ್ತಿದೆ. "ಬೋರ್ವೆಲ್ನಿಂದ ನೀರು ಸರಬರಾಜು ಮಾಡುವ ಪೈಪ್ ಡ್ಯಾಮೇಜ್ ಆಗಿ ಕಲುಷಿತ ನೀರು ಸರಬರಾಜು ಆಗಿದೆ. ಈ ನೀರು ಸೇವಿಸಿ ಜನರು ಅಸ್ವಸ್ಥಗೊಂಡಿದ್ದಾರೆ" ಎಂದು ಗ್ರಾಮಸ್ಥರು ಹೇಳಿದ್ದಾರೆ.
ದೇವದುರ್ಗ ತಾಲೂಕಿನ ರೇಖಲಮರಡಿಯಲ್ಲಿ ಕಲುಷಿತ ನೀರಿಗೆ ಬಾಲಕ ಬಲಿಯಾದ ಬೆನ್ನಲ್ಲೇ ಈಗ ಮತ್ತೊಂದು ಘಟನೆ ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ. ಓರ್ವ ಬಾಲಕನ ಸಾವಿನ ಬಳಿಕವೂ ಜಿಲ್ಲಾಡಳಿತ ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ ಎಂಬುದು ಸಾರ್ವಜನಿಕರ ದೂರು.
ತುರ್ತು ಕ್ರಮಕ್ಕೆ ಸಿಎಂ ಸೂಚನೆ: ಅಸ್ವಸ್ಥರಾಗಿರುವವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಣಾ ಅಧಿಕಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ ದೂರವಾಣಿ ಮೂಲಕ ಸಿಇಒ ಅವರೊಂದಿಗೆ ಮಾತನಾಡಿ ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿ, ಶುದ್ಧ ನೀರು ಪೂರೈಕೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಜಿಲ್ಲೆಯ ಗ್ರಾಮಗಳಲ್ಲಿ ಕಲುಷಿತ ನೀರು ಕುಡಿದು ಜನ ಅಸ್ವಸ್ಥರಾಗುತ್ತಿರುವ ವರದಿಗಳನ್ನು ಗಂಭೀರವಾಗಿ ಪರಿಗಣಿಸಿದ ಸಿಎಂ ಘಟನೆ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ಮುಖ್ಯಮಂತ್ರಿ ನೀಡಿದ ಸೂಚನೆಗಳು...
- ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಬೇಕು.
- ನೀರಿನ ಸ್ಯಾಂಪಲ್‌ಗಳನ್ನು ಲ್ಯಾಬ್ ಗೆ ಕಳುಹಿಸಿ ತಕ್ಷಣ ವರದಿ ತರಿಸಿಕೊಳ್ಳಬೇಕು.
- ವರದಿ ಆಧಾರದಲ್ಲಿ ಗ್ರಾಮಸ್ಥರ ಕೂಲಂಕುಷ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಚಿಕಿತ್ಸೆಗೆ ಕ್ರಮ ವಹಿಸಬೇಕು.
- ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿ, ವಿಷಪೂರಿತ ನೀರಿನ ಮೂಲಗಳನ್ನು ಬಂದ್ ಮಾಡಬೇಕು.
- ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು.
- ಎಲ್ಲ ಕ್ರಮಗಳನ್ನೂ ಸಮರ್ಪಕವಾಗಿ ತೆಗೆದುಕೊಂಡು ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು.
30 ಕ್ಕೂ ಹೆಚ್ಚು ಜನರು ಅಸ್ವಸ್ಥ: ಕಲುಷಿತ ನೀರು ಸೇವಿಸಿ ಮಗು ಸಾವನ್ನಪ್ಪಿ 30 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿತ್ತು. ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದ ಜನರು ಕಲುಷಿತ ನೀರು ಸೇವಿಸಿ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಘಟನೆಗೆ ಗ್ರಾ.ಪಂ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದರು. ಅಲ್ಲದೇ ರೇಖಲಮರಡಿ ಗ್ರಾಮದ ಮಗು ಕಲುಷಿತ ನೀರಿನ ಸೇವನೆಯ ಪರಿಣಾಮ ವಾಂತಿ, ಭೇದಿಯಿಂದ ಸಾವನ್ನಪ್ಪಿದೆ ಎಂದು ವೈದ್ಯರು ತಿಳಿಸಿದ್ದರು.
ಇದನ್ನೂ ಓದಿ: ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮಗು ಸಾವು; 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ