ರಾಯಚೂರು: ಅಕ್ರಮ ಮದ್ಯ ಮಾರಾಟ ತಡೆ ಹಿಡಿಯುವಂತೆ ಆಗ್ರಹಿಸಿ ಮಹಿಳೆಯರು ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಹಿಳೆಯು ನೇಣು ಬಿಗಿದುಕೊಂಡ ಅಣುಕು ಪ್ರದರ್ಶನ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ರು.
ನ್ಯಾಯಾಲಯವು ಅಕ್ರಮ ಮದ್ಯ ಮಾರಾಟವನ್ನು ತಡೆಯುವಂತೆ ಆದೇಶಿಸಿದ್ದು, ಇದನ್ನು ತಪ್ಪದೇ ಪಾಲಿಸಬೇಕು. ಆದರೆ ಜಿಲ್ಲೆಯಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಅಬಕಾರಿ ಇಲಾಖೆಗೆ ಹೆಸರು ಹಾಗೂ ಸ್ಥಳ ಸಮೇತ ಮಾಹಿತಿ ನೀಡಲಾಗಿದೆ. ಆದ್ರೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನ್ಯಾಯಾಲಯದ ಆದೇಶವನ್ನು ಉಲ್ಲಂಘನೆ ಮಾಡುತ್ತಿದ್ದಾರೆ. ಅಲ್ಲದೆ ಮದ್ಯವು ಗ್ರಾಮೀಣ ಭಾಗದಲ್ಲಿ ಎಲ್ಲೆಂದರಲ್ಲಿ ಸಿಗುವುದರಿಂದ ಬಡ ಕುಟುಂಬಗಳು ಬೀದಿಗೆ ಬೀಳುತ್ತಿವೆ ಅಂತಾ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.
ಈ ಸುದ್ದಿಯನ್ನೂ ಓದಿ: ದಂಪತಿ ಮೇಲೆ ದಾಳಿ ಮಾಡಿ ಮರವೇರಿದ್ದ ಚಿರತೆ ಸೆರೆ ಹಿಡಿದ ಅರಣ್ಯ ಇಲಾಖೆ
ಕೂಡಲೇ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟವನ್ನು ತಡೆಯಬೇಕು. ಇಲ್ಲದಿದ್ದರೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಹೋರಾಟಗಾರರು ಎಚ್ಚರಿಸುವ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ, ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.