ರಾಯಚೂರು: ಕೇಂದ್ರ ಸರ್ಕಾರದ ಕಾರ್ಮಿಕ ಕಾನೂನುಗಳ ಜಾರಿ ವಿರೋಧಿಸಿ ಹಾಗೂ ಕಾರ್ಮಿಕ ಸಂಘಟನೆಗಳ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಗಳ ಜಂಟಿ ಸಮಿತಿ ನೇತೃತ್ವದಲ್ಲಿ ಪದಾಧಿಕಾರಿಗಳು ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಪದಾಧಿಕಾರಿಗಳು, ಕೇಂದ್ರ ಸರ್ಕಾರವು ಕಾರ್ಮಿಕ, ರೈತ ಸಂಘಟನೆಗಳೊಂದಿಗೆ ಚರ್ಚಿಸದೆ ಸರ್ವಾಧಿಕಾರಿ ಪ್ರವೃತ್ತಿ ಪ್ರದರ್ಶಿಸಿರುವುದು ಖಂಡನೀಯವಾಗಿದೆ. ಇತ್ತೀಚೆಗೆ 44 ಕಾರ್ಮಿಕ ಕಾನೂನುಗಳನ್ನು ಸಮೀಕರಿಸಿ 4 ಕಾರ್ಮಿಕ ಸಂಹಿತೆಗಳನ್ನಾಗಿ ಮಾಡುವ ಮೂಲಕ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದರು.
ಎಲ್ಲಾ ರೈತ ವಿರೋಧಿ ಮತ್ತು ಕಾರ್ಮಿಕ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು. ರಾಜ್ಯ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆ ವಾಪಸ್ ಪಡೆಯಬೇಕು. ಶಿಕ್ಷಣ, ಆರೋಗ್ಯ, ರೈಲ್ವೆ, ವಿದ್ಯುತ್, ಬಿಎಸ್ಎನ್ಎಲ್, ವಿಮಾ, ಬ್ಯಾಂಕ್ ಮುಂತಾದ ಸಾರ್ವಜನಿಕ ವಲಯದ ಖಾಸಗೀಕರಣ ನಿಲ್ಲಿಸಬೇಕು. ಆದಾಯ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಕುಟುಂಬಗಳಿಗೆ ರೂ. 7500 ಪ್ರತಿ ತಿಂಗಳು ವರ್ಗಾವಣೆ ಮಾಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ವರ್ಷದ 200 ದಿನ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ನೀಡಬೇಕು. ಕೂಲಿ 600 ರೂ.ಗೆ ಹೆಚ್ಚಿಸಬೇಕು. ಅಂಗನವಾಡಿ, ಆಶಾ, ಬಿಸಿಯೂಟ ಸ್ಕೀಮ್ ಕಾರ್ಮಿಕರಿಗೆ ಕಾರ್ಮಿಕ ಸ್ಥಾನಮಾನ ನೀಡಿ 21,000 ರೂ. ಕನಿಷ್ಠ ವೇತನ ನೀಡಬೇಕು. ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂಬಿತ್ಯಾದಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.