ಲಿಂಗಸುಗೂರು: ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಕಟ್ಟಲು ಮುಖಂಡರು ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಬೇಕು ಎಂದು ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಅಸ್ಲಂ ಪಾಷ ಕರೆ ನೀಡಿದರು.
ಲಿಂಗಸುಗೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ಅವರು ಮಾತನಾಡಿದ್ದು, ಝೂಮ್ ಆ್ಯಪ್ ಮೂಲಕ ಪಂಚಾಯಿತಿ ಮಟ್ಟದಲ್ಲಿ ಮಾಹಿತಿ ನೀಡಲು ಮುಖಂಡರ ನೇಮಕ ಮಾಡಲಾಗುವುದು ಎಂದರು. ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸಾಮಾಜಿಕ ಜಾಲತಾಣ ಬಳಸಿಕೊಂಡು ಸುಳ್ಳನ್ನೇ ಸತ್ಯ ಎಂಬಂತೆ ಪ್ರಚಾರ ಮಾಡುತ್ತಿದ್ದಾರೆ. ಈ ಮೂಲಕ ಅಧಿಕಾರದ ಚುಕ್ಕಾಣಿಯನ್ನೂ ಹಿಡಿದಿದ್ದಾರೆ ಎಂದು ಆರೋಪಿಸಿದರು.
ದೇಶಕ್ಕೆ ಸ್ವಾತಂತ್ರ್ಯ ಕೊಡಿಸಿದ ಕಾಂಗ್ರೆಸ್ ಸಾಮಾಜಿಕ ಜಾಲತಾಣವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳದೆ ಹಿಂದುಳಿದಿದೆ. ಈಗಲಾದರೂ ಕಾರ್ಯಕರ್ತರು ಎಚ್ಚೆತ್ತುಕೊಂಡು ಪಕ್ಷದ ಬಲವರ್ಧನೆಗೆ ಶ್ರಮಿಸಬೇಕು ಎಂದು ತಿಳಿಸಿದರು.
ಶಾಸಕ ಡಿ.ಎಸ್. ಹೂಲಗೇರಿ ಮಾತನಾಡಿ, ಸದ್ಯದ ಪರಸ್ಥಿತಿಯಲ್ಲಿ ರಾಜ್ಯ ಕೆಪಿಸಿಸಿಗೆ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯ ಅನಿವಾರ್ಯತೆ ಇದೆ. ಡಿಕೆಶಿ ಸಾರಥ್ಯದಲ್ಲಿ ಪಕ್ಷ ಸಂಘಟನೆ ಮಾಡುವ ಮೂಲಕ ರಾಜ್ಯದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯೋಣ. ಕ್ಷೇತ್ರದ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸೋಣ ಎಂದು ಆಶಿಸಿದರು.