ರಾಯಚೂರು : ಕೊಲ್ಕತ್ತಾದ ಎಸ್. ಆರ್. ಎಸ್ ಮೆಡಿಕಲ್ ಕಾಲೇಜಿನಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ರೋಗಿಗಳ ಕುಟುಂಬಸ್ಥರು ನಡೆಸಿದ ಹಲ್ಲೆ ಖಂಡಿಸಿ ರಾಯಚೂರಿನಲ್ಲಿ ವೈದ್ಯರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಭಾರತೀಯ ವೈದ್ಯಕೀಯ ಸಂಘದ ಸದಸ್ಯರು, ಕೊಲ್ಕತ್ತಾದ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಿ, ವೈದ್ಯರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.
ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ 85 ವರ್ಷದ ವೃದ್ದರೊಬ್ಬರನ್ನು ದಾಖಲಿಸಿದಾಗ ಅವರ ಆರೋಗ್ಯ ತೀರಾ ಹದಗೆಟ್ಟ ಕಾರಣ ಸಾವನ್ನಪ್ಪಿದ್ದರು. ಆದರೆ ಈ ಸಾವಿಗೆ ವೈದ್ಯರೇ ಕಾರಣ ಎಂದು ಕುಟುಂಬ ಸದಸ್ಯರು ಆರೋಪಿಸಿ ಡಾ.ಪರಿಬಾಹ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿತ್ತು. ಇದರಿಂದ ತೀವ್ರವಾಗಿ ಗಾಯಗೊಂಡ ವೈದ್ಯರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ವೃದ್ಧನ ಸಾವು ಅಕಸ್ಮಿಕವಾದ್ರೂ ವೈದ್ಯರೇ ಕಾರಣ ಎಂದು ಆರೋಪಿಸಿ ಮಾರಣಾಂತಿಕ ಹಲ್ಲೆ ನಡೆಸಿದ್ದು ಖಂಡನಾರ್ಹ. ಈ ಕೂಡಲೇ ಆರೋಪಿಗಳನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವೈದ್ಯರು ಒತ್ತಾಯಿಸಿದ್ದಾರೆ.