ರಾಯಚೂರು: ಶಿಕ್ಷಣದಿಂದಲೇ ಪ್ರಗತಿ ಸಾಧ್ಯವಿದ್ದು, ಸರ್ವರಿಗೂ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪೂರ್ಣ ಪ್ರಮಾಣದ ರಾಯಚೂರು ವಿಶ್ವವಿದ್ಯಾಲಯ ಪ್ರಾರಂಭವಾಗಲಿದೆ ಎಂದು ನಗರ ಶಾಸಕ ಡಾ. ಶಿವರಾಜ್ ಪಾಟೀಲ್ ತಿಳಿಸಿದರು.
ನಗರದ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 132ನೇ ಜನ್ಮದಿನೋತ್ಸವದ ಅಂಗವಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣದ ಕಲಿಕೆಯಿಂದಲೇ ಬದಲಾವಣೆ ಸಾಧ್ಯವಿದ್ದು, ಬದಲಾದ ಕಾಲಘಟ್ಟಕ್ಕೆ ತಕ್ಕಂತೆ ಶಿಕ್ಷಣದ ರೂಪುರೇಷೆ ಬದಲಾಗುತ್ತಿದೆ ಎಂದರು.
ಈ ಭಾಗದಲ್ಲಿ ಅನೇಕ ಶೈಕ್ಷಣಿಕ ಅಭಿವೃದ್ಧಿಯ ಕಾರ್ಯಗಳು ನಡೆಯುತ್ತಿವೆ. ರಾಜ್ಯ ಸರ್ಕಾರ ಈ ಶೈಕ್ಷಣಿಕ ವರ್ಷದಿಂದ ರಾಯಚೂರು ವಿವಿ ಆರಂಭಿಸಲು ಸಮ್ಮತಿಸಿದ್ದು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಶಾಲೆಗಳಲ್ಲಿ ನೂರು ಕೊಠಡಿ ಕಟ್ಟಿಸಲು ಅನುದಾನ ಮೀಸಲಿಡಲಾಗಿದೆ. ಜಿಲ್ಲೆಯ ಗುರುಭವನ ಕಾಮಗಾರಿಗೆ ಯಕ್ಲಾಸಪುರ ಹತ್ತಿರ ಸ್ಥಳ ಗುರುತ್ತಿಸಿದ್ದು, ಶಾಸಕರ ಅನುದಾನದಲ್ಲಿ ಒಂದು ಕೋಟಿ ನೀಡಲಾಗುವುದು. ಮುಂದಿನ ವರ್ಷ ಗುರುಭವನದಲ್ಲಿ ಶಿಕ್ಷಕರ ದಿನಾಚರಣೆ ಆಚರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.ಇದೆ ವೇಳೆ ರಾಯಚೂರು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಉತ್ತಮವಾಗಿ ಸಾಧನೆಗೈದ 13 ಜನ ಶಿಕ್ಷಕರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಎಚ್. ಗೋನಾಳ, ರಾಯಚೂರು ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗೋಪಾಲ ರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ದೊಡ್ಡಮನಿ, ಡೈಯಟ್ ಉಪನಿರ್ದೇಶಕ ವೃಷಭೇಂದ್ರಯ್ಯಾ, ರವೀಂದ್ರ ಜಲ್ದಾರ್, ಎನ್ ಶ್ರೀನಿವಾಸ, ಕೆ. ಆಂಜನೇಯ ಸೇರಿದಂತೆ ಇತರರು ಉಪಸ್ಥಿತರಿದ್ದರು.