ರಾಯಚೂರು: ಭತ್ತ, ಹತ್ತಿ, ಸಜ್ಜೆ ಬೆಳೆಗಳಿಗೆ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸಿರವಾರ ತಾಲೂಕು ಘಟಕದಿಂದ ಪಟ್ಟಣದ ಮುಖ್ಯ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.
ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದ ಅಪಾರ ಪ್ರಮಾಣದ ಬೆಳೆ ಹಾನಿಯ ನಡುವೆ ಭತ್ತ, ಹತ್ತಿ ಮತ್ತು ಸಜ್ಜೆ ಬೆಳೆ ಮಾರುಕಟ್ಟಗೆ ಬರುತ್ತಿದೆ. ಆದರೆ ಮಾರುಕಟ್ಟೆಯಲ್ಲಿ ಬೆಳೆಗೆ ವೈಜ್ಞಾನಿಕ ಬೆಲೆ ಇಲ್ಲದೆ ರೈತರು ಕಂಗಾಲಾಗಿದ್ದು, ಕೂಡಲೇ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಬೇಕು.
ಭತ್ತಕ್ಕೆ ಮುಕ್ತ ಮಾರುಕಟ್ಟೆಯಲ್ಲಿ ದರ ಕುಸಿತವಾದಾಗ ಭತ್ತ ಖರೀದಿ ಕೇಂದ್ರ ಆರಂಭಿಸಬೇಕು. ಲಕ್ಷಾಂತರ ರೂ. ಖರ್ಚು ಮಾಡಿ ಬೆಳೆದ ಭತ್ತಕ್ಕೆ ಮಾರುಕಟ್ಟೆಯಲ್ಲಿ 1100ರಿಂದ 1200 ರೂ.ವರೆಗೆ ಬೆಲೆ ನೀಡಲಾಗುತ್ತಿದ್ದು, ಹಾಕಿದ ಬಂಡವಾಳ ಬಾರದಂತಾಗಿದೆ.
ಈ ಕೂಡಲೇ ರೈತರ ಸಂಕಷ್ಟಕ್ಕೆ ಸರ್ಕಾರ ಧಾವಿಸಿ ಪಂಚಾಯಿತಿಗೊಂದು ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಬೇಕು. ಭತ್ತ, ಹತ್ತಿ ಮತ್ತು ಸಜ್ಜೆ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು. ಮಧ್ಯವರ್ತಿಗಳ ಹಾವಳಿ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.