ಲಿಂಗಸುಗೂರು: ದೇವದಾಸಿ ಪುನರ್ವಸತಿ ಯೋಜನೆಯಡಿ ಮಹಿಳೆಯರ ಸ್ವಾವಲಂಬನೆಗೆ ಕೌಶಲ್ಯ ತರಬೇತಿ ಕಾರ್ಯಾಗಾರ ಹೆಚ್ಚು ಸಹಕಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ ಹೇಳಿದರು.
ಸೋಮವಾರ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಮಹಿಳೆಯರಿಗಾಗಿ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಕ್ಕೆ ತರುತ್ತಿದೆ. ಬಹುತೇಕರು ಅವುಗಳ ಸದ್ಬಳಕೆ ಮಾಡಿಕೊಳ್ಳದಿರುವುದರಿಂದ ಆರ್ಥಿಕ ಸ್ವಾವಲಂಬನೆ ಹೊಂದುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.
ಶತಮಾನಗಳಿಂದ ಆಚರಿಸಿಕೊಂಡು ಬಂದಿರುವ ದೇವದಾಸಿ ಪದ್ಧತಿಗೆ ತಿಲಾಂಜಲಿ ಹಾಕಬೇಕಿದೆ. ಇಂತಹ ಅನಿಷ್ಟ ಪದ್ಧತಿಯಿಂದ ಸಂಕಷ್ಟಕ್ಕೆ ಸಿಲುಕಿದ ಕುಟುಂಬ ಹೊರಬರಲು ಅವರ ಮಕ್ಕಳಿಗೂ ಕೌಶಲ್ಯ ತರಬೇತಿ ವಿಸ್ತರಣೆಗೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ತಿಳಿಸಿದರು.