ರಾಯಚೂರು: ಇಂದು ನಡೆದ ಗಣಿತ ಎಸ್ಎಸ್ಎಲ್ಸಿ ಪರೀಕ್ಷೆಯ ಪರೀಕ್ಷಾರ್ಥಿಗಳಿಗೆ ಮರು ಪರೀಕ್ಷೆ ಬರೆಯುವ ಪರೀಕ್ಷಾರ್ಥಿಗಳ ಪ್ರಶ್ನೆ ಪತ್ರಿಕೆ ನೀಡಿದ ಪರಿಣಾಮ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಶ್ರೀಕೃಷ್ಣದೇವರಾಯ ಶಿಕ್ಷಣ ಸಂಸ್ಥೆ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಈ ಕೇಂದ್ರದಲ್ಲಿ ಸುಮಾರು 450 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿದ್ದಾರೆ. ಇವರಲ್ಲಿ ಮೊದಲ ಬಾರಿಗೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಜೊತೆಯಲ್ಲಿ ಮರು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳೂ ಇದ್ದಾರೆ. ಆದ್ರೆ ಪರೀಕ್ಷಾ ಕೇಂದ್ರದ ಕೊಠಡಿಯೊಂದರಲ್ಲಿ ಇಂಗ್ಲಿಷ್ ಮಾಧ್ಯಮದ 8ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೊದಲ ಬಾರಿಗೆ ಪರೀಕ್ಷೆ ಬರೆಯುತ್ತಿರುವುದ್ದರಿಂದ ಹೊಸ ಪ್ರಶ್ನೆ ಪತ್ರಿಕೆ ಬದಲಾಗಿ ಮರು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಹಳೇ ವಿಷಯದ ಪ್ರಶ್ನೆ ಪತ್ರಿಕೆ ನೀಡಿದ್ದಾರೆ ಎನ್ನಲಾಗಿದೆ.
ಇದರಿಂದ ಗೊಂದಲಕ್ಕೆ ಸಿಲುಕಿದ ವಿದ್ಯಾರ್ಥಿಗಳು, ಪರೀಕ್ಷಾ ಕೊಠಡಿ ಮೇಲ್ವಿಚಾರಕರ ಗಮನಕ್ಕೆ ತಂದರೂ ಸರಿಯಾಗಿ ಸ್ಪಂದಿಸಿಲ್ಲ ಎಂದು ಆರೋಪಿಸಲಾಗಿದೆ. ಅದೇ ನಿಮ್ಮ ಪ್ರಶ್ನೆ ಪತ್ರಿಕೆಯೆಂದು ಹೇಳಿ ಪರೀಕ್ಷಾ ಮೇಲ್ವಿಚರಕರು ಗದರಿಸಿ ಪರೀಕ್ಷೆ ಬರೆಸಿದ್ದಾರೆ ಎನ್ನಲಾಗಿದೆ. ಇದರಿಂದ ಬೇರೆ ವಿಧಿಯಿಲ್ಲದೆ ತಮಗೆ ತಿಳಿದಷ್ಟು ಪರೀಕ್ಷೆ ಬರೆದು ಬಂದಿದ್ದಾರೆ. ಇಲಾಖೆಯ ಬೇಜವಾಬ್ದಾರಿತನದಿಂದ ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಮರು ಪರೀಕ್ಷೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರನ್ನು ದೂರವಾಣಿ ಮೂಲಕ ಸಂಪರ್ಕಿಸಿದಾಗ, ಮೊದಲ ಬಾರಿಗೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ “ಎ” ಪ್ರಶ್ನೆ ಪತ್ರಿಕೆ ನೀಡಬೇಕು. ಮರು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ “ಬಿ” ಪ್ರಶ್ನೆ ಪತ್ರಿಕೆ ನೀಡಬೇಕು. ಆದ್ರೆ ಎ ಪರೀಕ್ಷೆ ಪತ್ರಿಕೆ ನೀಡಬೇಕಾದ ವಿದ್ಯಾರ್ಥಿಗಳಿಗೆ ಬಿ ಪ್ರಶ್ನೆ ಪತ್ರಿಕೆ ನೀಡಿದ್ದರಿಂದ ಅಡಚಣೆಯಾಗಿದೆ. ಈ ಬಗ್ಗೆ ಎಸ್ಎಸ್ಎಲ್ಸಿ ಬೋರ್ಡ್ ಗಮನಕ್ಕೆ ತಂದು, ಈ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವಂತೆ ಮನವಿ ಪತ್ರ ಬರೆಯಲಾಗುವುದು ಎಂದಿದ್ದಾರೆ.