ರಾಯಚೂರು : ಮೂಲಭೂತ ಸೌಕರ್ಯಗಳ ಕೊರತೆಯಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆಯೂ ವಿದ್ಯಾರ್ಥಿ ನಿಲಯಗಳಿಗೆ ಹೆಚ್ಚುವರಿ ವಿದ್ಯಾರ್ಥಿಗಳ ಪ್ರವೇಶಾತಿಯನ್ನು ರದ್ದು ಪಡಿಸಿದ್ದು ಸರಿಯಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಆರೋಪಿಸಿದೆ.
ಇಂದು ಮಾಧ್ಯಮಗಳೊಂದಿಗೆ ಸಮಿತಿಯ ಜಿಲ್ಲಾ ಸಂಚಾಲಕ ಪರಶುರಾಮ ಅರೊಲಿ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ, ಪ.ಪಂಗಡ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ಶಿಕ್ಷಣ ಸಂಸ್ಥೆಗಳ ಅಧೀನದಲ್ಲಿ ನಡೆಯುತ್ತಿರುವ ವಸತಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿ 27/08/ 2018ರಿಂದ ಹೆಚ್ಚುವರಿ ವಿದ್ಯಾರ್ಥಿಗಳ ಪ್ರವೇಶವನ್ನು ಸಮಾಜ ಕಲ್ಯಾಣ ಇಲಾಖೆ ರದ್ದುಪಡಿಸಿದೆ.
ಇದರಿಂದ ಹಿಂದುಳಿದ ಸಮಾಜದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ದೂರಿದರು. ಈ ಕುರಿತು ಸಿಎಂ ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯಕ್ಕೆ ಅಗಮಿಸಿದಾಗ ಮನವಿ ಸಲ್ಲಿಸಿ ಹೇಳಿದ್ದು, ಇದನ್ನು ಸರಿಪಡಿಸುವುದಾಗಿ ಹೇಳಿದ್ದಾರೆ. ಆದರೂ ಈವರೆಗೆ ಯಾವುದೇ ಕ್ರಮ ಜರುಗಿಸಿಲ್ಲ. ಕೂಡಲೇ ಈ ಬಗ್ಗೆ ಗಮನಹರಿಸಿ ಹೆಚ್ಚುವರಿ ವಿದ್ಯಾರ್ಥಿಗಳ ಪ್ರವೇಶ ಯಥಾ ರೀತಿಯಲ್ಲಿ ಮುಂದುವರೆಸಬೇಕು ಎಂದು ಆಗ್ರಹಿಸಿದರು.
ಹಾಸ್ಟೆಲ್ ಪ್ರವೇಶವನ್ನು ಬಯಸಿ ಅರ್ಜಿ ಸಲ್ಲಿಸಿದ ಎಲ್ಲಾ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬೇಕು. ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ರೂ.3,000 ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 3,500 ರೂ.ಹಣ ಮಂಜೂರು ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.