ಲಿಂಗಸುಗೂರು : ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಜಿಲ್ಲೆಯ ಲಿಂಗಸುಗೂರಲ್ಲಿ ಭಾರತ ವಿದ್ಯಾರ್ಥಿ ಫೆಡರೇಶನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ವಿದ್ಯಾರ್ಥಿಗಳು ತಹಶೀಲ್ದಾರ್ ಶಾಲಂಸಾಬ ಮೂಲಕ ಸಿಎಂಗೆ ಮನವಿ ಸಲ್ಲಿಸಿ, ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ತೊಂದರೆಗಳಿಗೆ ತ್ವರಿತ ಪರಿಹಾರ ಕಂಡುಕೊಳ್ಳಬೇಕು ಎಂದು ಆಗ್ರಹಿಸಿದರು.
ಎಲ್ಲ ಹಂತದ ಪರೀಕ್ಷೆಗಳನ್ನು ಮುಂದೂಡಬೇಕು. ವಿದ್ಯಾರ್ಥಿ ಕುಟುಂಬಗಳಿಗೆ ತಿಂಗಳಿಗೆ 7500 ರೂ. ಪರಿಹಾರ ನೀಡಬೇಕು. ಆನ್ಲೈನ್ ಶಿಕ್ಷಣ ಕಡ್ಡಾಯಗೊಳಿಸಬೇಡಿ. ಫೆಲೋಶಿಪ್ ಶೀಘ್ರ ವಿತರಣೆ ಮಾಡಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಕರು, ಉಪನ್ಯಾಸಕರು, ಅತಿಥಿ ಉಪನ್ಯಾಸಕರಿಗೆ ವೇತನ ಪಾವತಿಸಬೇಕು. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸ್ಥಳಾಂತರ ಕೈಬಿಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.