ರಾಯಚೂರು: ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆ ಹಾಗೂ ಕೃಷ್ಣಾ, ಭೀಮಾ ನದಿಯಲ್ಲಿ ಉಂಟಾದ ಪ್ರವಾಹದಿಂದ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸೋಶಿಯಲ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಪದಾಧಿಕಾರಿಗಳು, ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಪ್ರಾಣ ಹಾನಿ, ಸಾವಿರಾರು ಎಕರೆ ಬೆಳೆ ಹಾನಿಯಾಗಿದೆ. ಕೃಷ್ಣ, ಭೀಮಾ ನದಿಯ ಪ್ರವಾಹದಿಂದ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಜಿಲ್ಲೆಯಲ್ಲಿ 18 ಜನರು, 78ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿದೆ. 700 ಮನೆಗಳು ಕುಸಿದಿದ್ದು, ಸುಮಾರು 2400 ಹೆಕ್ಟೇರ್ ಬೆಳೆ ಹಾನಿ ಸಂಭವಿಸಿದೆ ಎಂದರು.
ಗ್ರಾಮಾಂತರ ಪ್ರದೇಶಗಳ ರಸ್ತೆಗಳು ಹಾನಿಯಾಗಿವೆ. ಆದ್ದರಿಂದ ಜಿಲ್ಲಾಡಳಿತ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದರು.