ರಾಯಚೂರು: ಕೃಷಿ ಕ್ಷೇತ್ರದ ಸುಧಾಣೆ ಉದ್ದೇಶದಿಂದ ಕೇಂದ್ರ ಸರ್ಕಾರವು ಜಾರಿಗೊಳಿಸಿದ ಮಸೂದೆಗಳು ಕೃಷಿ ಕ್ಷೇತ್ರದ ವಿನಾಶ ಮತ್ತು ರೈತರಿಗೆ ಮರಣ ಶಾಸನವಾಗಲಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ತಾಹೇರ್ ಹುಸೇನ್ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸುತ್ತಿರುವ ರೈತ ಸಮುದಾಯಕ್ಕೆ ಬೆಂಬಲಿಸಿ ಎಲ್ಲ ಹೋರಾಟಗಳಲ್ಲಿ ಪಕ್ಷ ಸಾಥ್ ನೀಡಲಿದೆ. ಎಪಿಎಂಸಿಗಳ ನಿಯಂತ್ರಣವಿಲ್ಲದೇ ಸ್ವತಂತ್ರವಾಗಿ ವ್ಯಾಪಾರ ನಡೆಸುವ ಅವಕಾಶ ನೀಡಿರುವುದು ಕಾರ್ಪೋರೆಟ್ ಕಂಪನಿಗಳ ಪರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಾರ್ಯನಿರ್ವಹಿಸುತ್ತಿವೆ. ಇದು ದೇಶದ ಆಹಾರ ಭದ್ರತಾ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಎಂದು ಕಿಡಿಕಾರಿದರು.
ಉತ್ತರ ಪ್ರದೇಶದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡನೀಯವಾಗಿದ್ದು, ಅಲ್ಲಿನ ಕಾನೂನು ಸುವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ. ಈ ಘಟನೆ ಕುರಿತು ಅಲ್ಲಿನ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.