ರಾಯಚೂರು: ರಾಜ್ಯ ಸರ್ಕಾರ ಹೊಸದಾಗಿ ಶಾಲೆ ಪ್ರಾರಂಭಿಸಲು ಅನುಮತಿಗಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಅರ್ಜಿ ಆಹ್ವಾನ ಹಾಗೂ ವಿನಾಯಿತಿಯಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ. ಕೂಡಲೇ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ಸಂಚಾಲಕ ಡಾ. ರಜಾಕ್ ಉಸ್ತಾದ್ ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ 2020-21ನೇ ಶೈಕ್ಷಣಿಕ ಸಾಲಿನಲ್ಲಿ 9 ಮತ್ತು10ನೇ ತರಗತಿ ಪ್ರಾರಂಭಿಸಲು ಅನುಮತಿಗಾಗಿ ಕಳೆದ ವರ್ಷ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿತ್ತು. ಲಾಕ್ ಡೌನ್ ಸಂದರ್ಭದಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇದ್ದದ್ದರಿಂದ ಕೆಲ ಶಿಕ್ಷಣ ಸಂಸ್ಥೆಗಳು ಅರ್ಜಿಯಲ್ಲಿ ಕೇಳಿದ ದಾಖಲೆಯನ್ನು ಸೂಕ್ತ ಸಮಯದಲ್ಲಿ ಸಲ್ಲಿಸಲು ಸಾಧ್ಯವಾಗಿಲ್ಲ. ಇಂತಹ ಅರ್ಜಿಗಳನ್ನು ಸರ್ಕಾರ ತಿರಸ್ಕರಿಸಿದ್ದು ಸ್ವಾಗತಾರ್ಹ.
ಆದರೆ, ಶಿಕ್ಷಣ ಇಲಾಖೆ ಡಿ.22 ರಂದು ಯಾವ ಅಂಶಗಳ ಆಧಾರದಲ್ಲಿ ಶಿಕ್ಷಣ ಸಂಸ್ಥೆಗಳ ಅರ್ಜಿಗಳನ್ನು ತಿರಸ್ಕರಿಸಲಾಗಿತ್ತೋ ಅಂತಹ ಶಿಕ್ಷಣ ಸಂಸ್ಥೆಗಳು ಸೂಕ್ತ ದಾಖಲಾತಿಗಳು ಮತ್ತೊಮ್ಮೆ ಆನ್ ಲೈನ್ ಮೂಲಕ ಅಪ್ ಲೋಡ್ ಮಾಡಲು ಅವಕಾಶ ನೀಡಿ ಆದೇಶ ಮಾಡಿದೆ. ಈ ಆದೇಶ ಕೇವಲ ಬೆಂಗಳೂರು ಮತ್ತು ಮೈಸೂರು ವಿಭಾಗಗಳಲ್ಲಿರುವ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಅವಕಾಶ ಕಲ್ಪಿಸಿ, ಕಲಬುರಗಿ ಮತ್ತು ಬೆಳಗಾವಿ ವಿಭಾಗದ ಶಿಕ್ಷಣ ಸಂಸ್ಥೆಗಳಿಗೆ ಅವಕಾಶ ನೀಡದೇ ಮಲತಾಯಿ ಧೋರಣೆ ಅನುಸರಿಸುತ್ತಿರುವುದು ಸ್ಪಷ್ಟವಾಗಿದೆ. ಕೂಡಲೇ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು. ಶಿಕ್ಷಣ ಇಲಾಖೆ ಆದೇಶವನ್ನು ರಾಜ್ಯಕ್ಕೆ ಅನ್ವಯಿಸುವಂತೆ ಆದೇಶಿಸಬೇಕು ಎಂದು ಒತ್ತಾಯಿಸಿದರು
ಸರ್ಕಾರದ ಈ ಆದೇಶದಿಂದ ಕಲಬುರಗಿ ವಿಭಾಗದಲ್ಲಿ ಸುಮಾರು 176 ಖಾಸಗಿ ಶಿಕ್ಷಣ ಸಂಸ್ಥೆಗಳ ಅರ್ಜಿ ತಿರಸ್ಕಾರಗೊಂಡಿವೆ ಎಂದು ರಜಾಕ್ ಉಸ್ತಾದ್ ತಿಳಿಸಿದರು.