ರಾಯಚೂರು: ಮಾದಕ ವಸ್ತುಗಳ ಸಾಗಾಣಿಕೆ ಹಾಗೂ ಮಾರಾಟದಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ಯಾವ ರೀತಿ ಕಾನೂನು ಕ್ರಮ ಕೈಗೊಳ್ಳಬೇಕು, ಯಾವ ಶಿಕ್ಷೆ ನೀಡಬೇಕು ಎನ್ನುವುದರ ಕುರಿತು ದೇಶದಲ್ಲಿ ಎನ್ಡಿಪಿಎಸ್ ಕಾಯ್ದೆ ಜಾರಿಗೊಳಿಸಲಾಗಿದ್ದು, ಕಾಯ್ದೆ ಕುರಿತು ಪೊಲೀಸ್ ಅಧಿಕಾರಿಗಳು ಸಮರ್ಪಕವಾಗಿ ಅಧ್ಯಯನ ಮಾಡಬೇಕು ಎಂದು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮುಸ್ತಫ್ ಹುಸೇನ್ ಮಾಹಿತಿ ನೀಡಿದ್ದಾರೆ.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾದಕ ವಸ್ತುಗಳ ಸಾಗಾಣಿಕೆ ಮತ್ತು ತಡೆ ಕಾಯ್ದೆ (ಎನ್ಡಿಪಿಎಸ್) ಕುರಿತು ಒಂದು ದಿನದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಮಾನವನಿಗೆ ಮಾರಕವಾಗುವ ಮಾದಕ ವಸ್ತುಗಳ ಸೇವನೆ ಹಾಗೂ ಮಾರಾಟದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ನ್ಯಾಯಾಲಯದ ಮುಂದೆ ಹಾಜರಾತಿಗೂ ಮುನ್ನ ಪೊಲೀಸರು ಬಂಧಿಸಿ ಯಾವ ಯಾವ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂಬುದರ ಕುರಿತು ತಿಳಿಸಿದರು.
ಇತ್ತೀಚಿಗೆ ಜಿಲ್ಲೆಯಲ್ಲಿ ಬೆಳೆಗಳ ಮಧ್ಯೆ ಗಾಂಜಾ ಬೆಳೆದಿರುವ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಈ ಆರೋಪಿಗಳಿಂದ ಗಾಂಜಾ ಬೆಳೆ ವಶಕ್ಕೆ ಪಡೆಯಲಾಗಿದ್ದರೂ ಆರೋಪಿಗಳ ವಿರುದ್ಧ ಯಾವ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಬೇಕು, ಆರೋಪಿಯನ್ನು ನ್ಯಾಯಾಲಯಕ್ಕೆ ಹೇಗೆ ಹಾಜರು ಪಡಿಸಬೇಕು, ಪ್ರಕರಣಕ್ಕೆ ಸಂಬಂಧಿಸಿದ ಕೆಲ ಸೆಕ್ಷನ್ಗಳು ಇರುವುದರಿಂದ ತೀರ್ಪು ನೀಡುವುದು ಸವಾಲಿನ ಕಾರ್ಯವಾಗಿದೆ. ಹೀಗಾಗಿ ತನಿಖೆ ಸಮಯದಲ್ಲಿ ಅಗತ್ಯವಾದ ದಾಖಲೆಗಳು, ಸಾಕ್ಷಿಗಳನ್ನು ಕಲೆಹಾಕಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದಲ್ಲಿ ಮಾತ್ರ ತೀರ್ಪು ನೀಡಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಒಂದನೇ ಹೆಚ್ಚುವರಿ ನ್ಯಾಯಾಧೀಶರಾದ ಅವಿನಾಶ ಘಾಳಿ, ಎಡರನೇ ಹೆಚ್ಚುವರಿ ನ್ಯಾಯಾಧೀಶರಾದ ನರಸಿಂಹ ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ, ಜಿಲ್ಲಾ ಅಭಿಯೋಜಕ ಟಿ.ಸುದರ್ಶನ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶರಾದ ಎಂ.ಸಿ.ನಾಡಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.