ರಾಮನಗರ: ಕೋವಿಡ್ ಸೋಂಕಿನಿಂದ ತಂದೆ-ತಾಯಿಯನ್ನು ಕಳೆದುಕೊಂಡ ಅನಾಥ ಮಕ್ಕಳಿಗೆ ನೆರವು ನೀಡಲು ಬಾಲ ಸೇವಾ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಬಾಲಸೇವಾ ಯೋಜನೆಯಡಿ ಪ್ರತಿ ತಿಂಗಳು ಮಕ್ಕಳಿಗೆ ಮೂರುವರೆ ಸಾವಿರ ರೂ ಹಾಗೂ ಉಚಿತ ಶಿಕ್ಷಣ, ಎಸ್ಎಸ್ಎಲ್ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ನೀಡಲಾಗುವುದು. 21 ವರ್ಷ ಪೂರೈಸಿದ ಹೆಣ್ಣುಮಕ್ಕಳಿಗೆ ಒಂದು ಲಕ್ಷ ರೂ ನೆರವು ನೀಡಲಾಗುವುದು ಎಂದರು.
ಅನಾಥ ಮಕ್ಕಳನ್ನು ಪಾಲಕರು ಪೋಷಿಸಲು ಅಸಮರ್ಥರಾಗಿದ್ದರೆ ದಾನಿಗಳ ನೆರವಿನಿಂದ ಇವರಿಗೆ ಶಿಕ್ಷಣ, ತರಬೇತಿ, ಇನ್ನಿತರ ನೆರವು ಕಲ್ಪಿಸಲು ದತ್ತು ಪ್ರಕ್ರಿಯೆ ಕೈಗೊಳ್ಳಲು ಸಹ ಇಲಾಖೆ ಕ್ರಮಕೈಗೊಳ್ಳಲಿದೆ. ರಾಜ್ಯದಲ್ಲಿ ಕೋವಿಡ್‍ನಿಂದ ಪಾಲಕರು ಮೃತರಾಗಿ ಅನಾಥವಾಗಿರುವ 48 ಮಕ್ಕಳನ್ನು ಗುರುತಿಸಲಾಗಿದೆ. ರಾಮನಗರ ಜಿಲ್ಲೆಯಲ್ಲಿ ಇಬ್ಬರು ಮಕ್ಕಳನ್ನು ಗುರುತಿಸಲಾಗಿದೆ ಎಂದು ಹೇಳಿದರು.
ಮಕ್ಕಳಿಗೆ ಪ್ರತ್ಯೇಕ ಚಿಕಿತ್ಸಾ ವ್ಯವಸ್ಥೆ: ಕೋವಿಡ್ 3ನೇ ಅಲೆಯು ಮಕ್ಕಳ ಮೇಲೆ ಪ್ರಭಾವ ಬೀರುತ್ತದೆ ಎಂಬ ತಜ್ಞರ ಅಭಿಪ್ರಾಯದ ಹಿನ್ನೆಲೆ ರಾಜ್ಯಾದ್ಯಂತ ಪ್ರವಾಸ ಕೈಗೊಂಡು, ಮಕ್ಕಳು ಸೋಂಕಿಗೆ ತುತ್ತಾಗದಂತೆ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಸೋಂಕಿಗೆ ತುತ್ತಾದಲ್ಲಿ ಮಕ್ಕಳಿಗೆ ಪ್ರತ್ಯೇಕ ಚಿಕಿತ್ಸಾ ವ್ಯವಸ್ಥೆ ಕುರಿತಂತೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಕುರಿತಂತೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಮಕ್ಕಳಿಗಾಗಿ 50 ಐಸಿಯು ಬೆಡ್ ವ್ಯವಸ್ಥೆ: ಕೋವಿಡ್ 3ನೇ ಅಲೆಯು ಮಕ್ಕಳ ಮೇಲೆ ಹೆಚ್ಚಿನ ಪ್ರಭಾವ ಬೀರುತ್ತದೆ ಎಂದು ಹಲವು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿರುವ ಹಿನ್ನೆಲೆ ಈಗಾಗಲೇ ಈ ಕುರಿತಂತೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಆರೋಗ್ಯ ಸಚಿವರ ಜೊತೆಗೂಡಿ ಚರ್ಚಿಸಲಾಗಿದೆ. ಮಕ್ಕಳಿಗಾಗಿ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತ್ಯೇಕ ಮಕ್ಕಳ ಕೋವಿಡ್ ವಾರ್ಡ್ ವ್ಯವಸ್ಥೆ, ಐಸಿಯು ವ್ಯವಸ್ಥೆಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ಇಲಾಖೆಯ ಪ್ರಸ್ತಾವನೆಯನ್ನು ಒಪ್ಪಿದ ಕಾರಣ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಈ ಕುರಿತಂತೆ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು.
ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ಮಕ್ಕಳಿಗಾಗಿ 50 ಐಸಿಯು ಬೆಡ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ 9 ಸರ್ಕಾರಿ ಮಕ್ಕಳ ತಜ್ಞರಿದ್ದು, ಖಾಸಗಿ ಅವರೊಂದಿಗೆ ಚರ್ಚಿಸಿ ಅಲ್ಲಿಯ ಮಕ್ಕಳ ತಜ್ಞರ ಸೇವೆ ಸಹ ಪಡೆದುಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದರು.