ರಾಮನಗರ: ಹಾರೋಬೆಲೆಯ ಕಪಾಲ ಬೆಟ್ಟದಲ್ಲಿ ಜಗತ್ತಿನ ಅತ್ಯಂತ ಎತ್ತರದ ಏಸು ಪ್ರತಿಮೆ ನಿರ್ಮಾಣ ವಿರೋಧಿಸಿ ನಡೆಯುತ್ತಿದ್ದ ಹೋರಾಟ ಮತ್ತೆ ಚುರುಕುಗೊಂಡಿದೆ. ಏಸು ಪ್ರತಿಮೆ ನಿರ್ಮಾಣ ತಡೆಗಟ್ಟುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎಂದು ಆರೋಪಿಸಿ ಹಿಂದೂ ಜಾಗರಣಾ ವೇದಿಕೆ ಇದೇ ತಿಂಗಳ 25 ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಬೇಕು ಎಂದು ಯೋಜಿಸಿಕೊಂಡಿದೆ.
ನಗರದ ಪ್ರವಾಸಿ ಮಂದಿರದಲ್ಲಿ ಹಿಂದೂ ಜಾಗರಣಾ ವೇದಿಕೆ ಪತ್ರಿಕಾಗೋಷ್ಠಿ ನಡೆಸಿ, ಇದೇ ತಿಂಗಳ 25 ರಂದು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹೋರಾಟ ಹಮ್ಮಿಕೊಂಡಿರುವುದಾಗಿ ಹಿಂದೂ ಜಾಗರಣಾ ವೇದಿಕೆ ಜಿಲ್ಲಾಧ್ಯಾಕ್ಷ ಗಜೇಂದ್ರ ಸಿಂಗ್ ತಿಳಿಸಿದರು.
ಮುನೇಶ್ವರ ಬೆಟ್ಟ ಉಳಿಸಿ ಎಂದು ಕನಕಪುರ ಚಲೋ ಕಾರ್ಯಕ್ರಮದ ಮೂಲಕ ಮುನೇಶ್ವರ ಬೆಟ್ಟದಲ್ಲಿ ಈಗಾಗಲೇ ನಿರ್ಮಾಣಗೊಂಡಿರುವ ಅಕ್ರಮ ಕಟ್ಟಡ, ಏಸು ಪ್ರತಿಮೆ ನಿರ್ಮಾಣಕ್ಕೆ ಸಂಗ್ರಹಿಸಿರುವ ಕಲ್ಲು ಮತ್ತು ಇತರೆ ಸಾಮಾಗ್ರಿಗಳನ್ನು ವಶಪಡಿಸಿಕೊಳ್ಳಬೇಕು ಹಾಗೂ ಸರ್ಕಾರದಿಂದ ಮಂಜೂರಾಗಿರುವ ಜಮೀನನ್ನು ವಾಪಸ್ ಪಡೆಯಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ, ಜಿಲ್ಲಾಧಿಕಾರಿಗಳು ಏಸು ಪ್ರತಿಮೆ ನಿರ್ಮಾಣದ ವಿರುದ್ಧ ಕ್ರಮ ಕೈಗೊಳ್ಳಲು ವಿಪಲರಾಗಿದ್ದಾರೆ ಎಂದು ಆರೋಪಿಸಿದರು.
ಇದೇ ವೇಳೆ ಮಾತನಾಡಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್. ಸುರೇಶ್ ಜನವರಿಯಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಹಾಗೂ ರಾಜ್ಯಪಾಲರಿಗೆ ಏಸು ಪ್ರತಿಮೆ ನಿರ್ಮಾಣ ತಡೆಗಟ್ಟುವಂತೆ ಜನವರಿ 25ರ ವರಗೆ ಗಡವು ನೀಡಲಾಗಿತ್ತು. ಇಲ್ಲಿಯವರೆಗೆ ಸರ್ಕಾರ ಹಾಗೂ ಜಿಲ್ಲಾಡಳಿತ ವಿಳಂಬ ನೀತಿ ಅನುಸರಿಸುತ್ತಿರುವ ಹಿನ್ನಲೆ ಕೋಲಾರದಲ್ಲಿ ನಡೆದ ಹಿಂದೂ ಜಾಗರಣಾ ವೇದಿಕೆಯ ತ್ರೈವಾರ್ಷಿಕ ಸಮ್ಮೇಳನದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವ ನಿರ್ಣಯ ಕೈಗೊಳ್ಳಲಾಗಿದೆ ಎಂದರು.