ರಾಮನಗರ: ಕೊರೊನಾ ವೈರಸ್ ಸಂದರ್ಭದಲ್ಲಿ ರಾಜ್ಯ ರಾಜಕಾರಣ ರಂಗೇರಿದ್ದು, ತ್ರಿಪಕ್ಷಗಳು ಕೂಡ ರಣತಂತ್ರ ಹೆಣೆಯುತ್ತಿವೆ. ಇದೇ ಸಂದರ್ಭದಲ್ಲಿ 15 ಜನ ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದು, ಇದೀಗ ತೀವ್ರ ಚರ್ಚೆಗೆ ಕಾರಣವಾಗಿವೆ. ಈ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಆಪರೇಷನ್ ಕಮಲದ ಮಾತು ಮುನ್ನೆಲೆಗೆ ಬಂದಂತಾಗಿದೆ.
ರಾಮನಗರದಲ್ಲಿ ಸಿ.ಪಿ. ಯೋಗೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿದ ನಳಿನ್ ಕುಮಾರ್ ಕಟೀಲ್, ಈಗಾಗಲೇ 15 ಜನ ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದರು. ಜೊತೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಬಿ.ಎಸ್.ಯಡಿಯೂರಪ್ಪ ಸರ್ಕಾರಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ ಎಂಬ ಯೋಗೇಶ್ವರ್ ಹೇಳಿಕೆ ಹೆಚ್ಚು ಉಲ್ಲೇಖಿಸುವುದಿಲ್ಲ ಎಂದು ಪ್ರತಿಕ್ರಿಯೆಗೆ ನಿರಾಕರಿಸಿದರು. ಕೊರೊನಾ ಸಂದರ್ಭದಲ್ಲಿ ರಾಜ್ಯ ರಾಜಕಾರಣದಲ್ಲಿ ಹಲವು ಬೆಳವಣಿಗೆಗಳು ಆಗುತ್ತಿದ್ದು, ತ್ರಿಪಕ್ಷಗಳು ರಾಜಕೀಯ ಅಸ್ತಿತ್ವಕ್ಕೆ ಹಲವು ರಣತಂತ್ರ ಹೆಣೆಯುತ್ತಿವೆ. ಇದೇ ಸಂದರ್ಭದಲ್ಲಿ 15 ಜನ ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂಬ ಕಟೀಲ್ ಹೇಳಿಕೆ ತೀವ್ರ ಚರ್ಚೆಗೆ ಕಾರಣವಾಗಿದೆ.
ಗುರುವಾರ ನೂತನ ಪರಿಷತ್ ಸದಸ್ಯರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಸಿ.ಪಿ. ಯೋಗೇಶ್ವರ್, ಡಿ.ಕೆ. ಶಿವಕುಮಾರ್ ರಾತ್ರಿಯಾದರೆ ಸಿಎಂ ಯಡಿಯೂರಪ್ಪ ಬಳಿ ಬಂದು ತಮಗೆ ಬೇಕಾದ ಕೆಲಸ ಮಾಡಿಸಿಕೊಳ್ಳುತ್ತಾರೆ. ಎಚ್.ಡಿ. ಕುಮಾರಸ್ವಾಮಿ ಹೇಳಿದ ಎಲ್ಲ ಕೆಲಸಗಳೂ ನಮ್ಮ ಸರ್ಕಾರಲ್ಲಿ ಆಗುತ್ತಿವೆ. ಹೀಗಾಗಿ ಅವರಿಗೆ ಬಿಜೆಪಿ ಸೇರ್ಪಡೆಯಾಗುವಂತೆ ಬಹಿರಂಗ ಆಹ್ವಾನ ನೀಡುತ್ತಿದ್ದೇನೆ ಎಂದು ಹೇಳಿದ್ದರು.
ಇನ್ನು, ಪದಾಧಿಕಾರಿಗಳ ನೇಮಕ ವಿಚಾರದಲ್ಲಿ ಪಕ್ಷದ ಸಿದ್ಧಾಂತಗಳನ್ನು ಗಾಳಿಗೆ ತೂರಲಾಗಿದೆ ಎಂಬುದಕ್ಕೆ ಪ್ರತಿಕ್ರಿಯಿಸಿದ ಕಟೀಲ್, ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಅಸಮಾಧಾನಕ್ಕೂ ಭಾವನೆಗಳಿಗೂ ವ್ಯತ್ಯಾಸಗಳಿವೆ. ಎರಡು-ಮೂರು ದಿನಗಳಲ್ಲಿ ಸರಿ ಮಾಡುತ್ತೇನೆ ಎಂದಿದ್ದು, ಈ ಮೂಲಕ ರಾಮನಗರ ಬಿಜೆಪಿಯಲ್ಲಿ ಸೃಷ್ಟಿಯಾಗಿದ್ದ ಅಸಮಾಧಾನ ತಣಿಸುವ ಪ್ರಯತ್ನ ಮಾಡಿದರು.