ರಾಮನಗರ : ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧ ರೇಷ್ಮೆನಗರಿ ರಾಮನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಕೆಂಗಲ್ ಹನುಮಂತಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದರು.
ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ಬಳಿಕ ಪಶುಪಾಲನೆ ಇಲಾಖೆ ಆಂಬ್ಯುಲೆನ್ಸ್ ಮೇಲೆ ನಿಂತು ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ, ಸಿದ್ದರಾಮಯ್ಯ ಭಾವಚಿತ್ರಕ್ಕೆ ಮಸಿ ಬಳಿದರು. ಕೇಂದ್ರ ಪುರಸ್ಕೃತ ಯೋಜನೆಯಲ್ಲೇ ಪ್ರಧಾನಿ ನರೇಂದ್ರ ಮೋದಿಗೆ ಅಪಮಾನ ಎಂದು ಘೋಷಣೆ ಕೂಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ಪ್ರತಿಭಟನೆ: ಕರಸೇವಕನ ಬಂಧನ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ಸೇರಿದಂತೆ ರಾಜ್ಯದ ಹಲವೆಡೆ ಬುಧವಾರ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತ್ತು. ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ವೇಳೆ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ರಾಜ್ಯ ಸರ್ಕಾರಕ್ಕೆ 48 ಗಂಟೆಗಳ ಗಡುವು ನೀಡುತ್ತಿದ್ದು, ಅಷ್ಟರಲ್ಲಿ ಶ್ರೀಕಾಂತ್ ಪೂಜಾರಿ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ, ಹುಬ್ಬಳ್ಳಿ ಪೊಲೀಸ್ ಠಾಣೆಗೆ ಬಿಜೆಪಿ ಯುವ ಮೋರ್ಚಾ ಮುತ್ತಿಗೆ ಹಾಕಲಿದೆ. ಶ್ರೀಕಾಂತ್ ಪೂಜಾರಿಗೆ ನ್ಯಾಯ ಸಿಗುವವರೆಗೂ ಹೋರಾಟ ನಡೆಯಲಿ ಎಂದು ಎಂದು ಸರ್ಕಾರಕ್ಕೆ ನೀಡಿದ್ದರು.
"ಕಳೆದ ಕೆಲ ದಿನಗಳಿಂದ ರಾಜ್ಯ ಮಾತ್ರವಲ್ಲದೆ, ಇಡೀ ದೇಶದಲ್ಲಿ ಉತ್ಸವದ ವಾತಾವರಣ ಇದೆ. ನೂರಾರು ವರ್ಷದಿಂದ ರಾಮಮಂದಿರ ನಿರ್ಮಾಣಕ್ಕೆ ಹೋರಾಟ ನಡೆದು, ಹಿಂದೂಗಳ ತಪಸ್ಸಿನಿಂದ ಇದೀಗ ಪ್ರಧಾನಿ ಮೋದಿ ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿರುವ ಹಿಂದೂ ವಿರೋಧಿ, ರಾಮ ವಿರೋಧಿ ಕಾಂಗ್ರೆಸ್ ಸರ್ಕಾರ ಮಂತ್ರಾಕ್ಷತೆ ಹಂಚುವುದಕ್ಕೆ ತಡೆ ಒಡ್ಡುತ್ತಿದೆ" ಎಂದು ಆರೋಪ ಮಾಡಿದ್ದರು.
ಇದನ್ನೂ ಓದಿ : ಅಪರಾಧಿಗಳಿಗೆ ಜಾತಿ ಧರ್ಮದ ಬಣ್ಣ ಹಚ್ಚುವುದು ಅಪಾಯಕಾರಿ: ಬಿಜೆಪಿ ವಿರುದ್ಧ ಸಿಎಂ ಕಿಡಿ
ಬಿಜೆಪಿ ಪ್ರತಿಭಟನೆ ಕುರಿತಂತೆ ಬುಧವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದ ಸಿಎಂ ಸಿದ್ದರಾಮಯ್ಯ, "ಅಪರಾಧಿಗಳಿಗೆ ಜಾತಿ, ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ ಎನ್ನುವುದನ್ನು ಬಿಜೆಪಿ ನಾಯಕರು ಅರ್ಥಮಾಡಿಕೊಳ್ಳಬೇಕು. ನಾಲ್ಕುವರೆ ವರ್ಷಗಳ ಕಾಲ ದುರಾಡಳಿತ ಮತ್ತು ಭ್ರಷ್ಟಾಚಾರ, ಹಗರಣಗಳಲ್ಲಿಯೇ ಕಾಲ ಕಳೆದಿದ್ದ ಭಾರತೀಯ ಜನತಾ ಪಕ್ಷಕ್ಕೆ ನಮ್ಮ ಸರ್ಕಾರದ ಸಾಧನೆಗಳಿಗೆ ವ್ಯಕ್ತವಾಗುತ್ತಿರುವ ಜನಸ್ಪಂದನೆ ದಿಗಿಲು ಹುಟ್ಟಿಸಿದೆ. ಇದಕ್ಕಾಗಿ ಹುಬ್ಬಳ್ಳಿಯ ಕ್ರಿಮಿನಲ್ ಆರೋಪಿಯೊಬ್ಬನ ಬಂಧನದ ಎಳೆ ಹಿಡಿದುಕೊಂಡು ನೇತಾಡುತ್ತಿದ್ದಾರೆ" ಎಂದು ವಾಗ್ದಾಳಿ ನಡೆಸಿದ್ದರು.