ರಾಮನಗರ: ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರ ಹುಟ್ಟೂರು ವೀರಾಪುರದಲ್ಲಿ ಶ್ರೀಗಳ 111 ಅಡಿ ಎತ್ತರದ ಬೃಹತ್ ಪ್ರತಿಮೆಗೆ ಶಂಕುಸ್ಥಾಪನೆ ಕಾರ್ಯಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಿಎಂ ಯಡಿಯೂರಪ್ಪರವರು ಈ ಕಾರ್ಯವನ್ನ ನೆರವೇರಿಸಲಿದ್ದಾರೆ.
ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಹೋಬಳಿಯಲ್ಲಿರುವ ಶಿವಕುಮಾರ ಸ್ವಾಮೀಜಿಯವರ ಹುಟ್ಟೂರು ವೀರಾಪುರದಲ್ಲಿ ದಿನಾಂಕ 08-11-2019 ರಂದು ಈ ಮಹಾ ಕಾರ್ಯ ನಡೆಯಲಿದೆ. ಕಳೆದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಶ್ರೀಗಳ ಹುಟ್ಟೂರನ್ನ ಸಾಂಸ್ಕೃತಿಕ ಹಾಗೂ ಪಾರಂಪರಿಕ ಗ್ರಾಮವಾಗಿ ಮಾಡಬೇಕೆಂದು ಚಿಂತನೆ ನಡೆಸಿ 25 ಕೋಟಿ ರೂಪಾಯಿ ಹಣ ಘೋಷಿಸಲಾಗಿತ್ತು.
ಈಗ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಹಣ ಬಿಡುಗಡೆಯಾಗಿದ್ದು, ಶ್ರೀಗಳ 111 ಅಡಿ ಎತ್ತರದ ಬೃಹತ್ ಪ್ರತಿಮೆಯನ್ನ 16 ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡುವುದಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಜೊತೆಗೆ ಉದ್ಯಾನವನ ಸೇರಿದಂತೆ ಹಲವು ಅಭಿವೃದ್ಧಿ ಕೆಲಸ ಕಾರ್ಯ ಮಾಡಲು ಚಿಂತನೆ ನಡೆಸಿದೆ. ರಾಜ್ಯ ಸರ್ಕಾರದ ಈ ಕಾರ್ಯಕ್ಕೆ ಶ್ರೀಗಳ ಕುಟುಂಬಸ್ಥರು ಅಭಿನಂದಿಸಿದ್ದಾರೆ.
ಇನ್ನು, ಸಿಎಂ ಯಡಿಯೂರಪ್ಪನವರು ಶ್ರೀಗಳ ಪ್ರತಿಮೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಈಗಾಗಲೇ ಜಿಲ್ಲಾಡಳಿತ ಸಕಲ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳುತ್ತಿದೆ. ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಎ ಶೆಟ್ಟಿ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುವ ಮೂಲಕ ಕಾರ್ಯಕ್ರಮದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.
ಸಿಎಂ ಕಾರ್ಯಕ್ರಮ ತರಾತುರಿಯಲ್ಲಿ ಆಯೋಜನೆಯಾಗಿದೆ. ಆದರೂ ಕೂಡ ಸಕಲ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ತಿಳಿಸಿದರು. ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುತ್ತಾರೆಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ. ಭದ್ರತೆಗಾಗಿ 1 ಸಾವಿರಕ್ಕೂ ಹೆಚ್ಚು ಪೊಲೀಸರನ್ನ ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ.