ರಾಮನಗರ: ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ನೀವು ಲಸಿಕೆ ಪಡೆದುಕೊಳ್ಳುವುದರ ಜೊತೆಗೆ ತಮ್ಮ ಸುತ್ತಮುತ್ತಲಿನ ಜನರಿಗೂ ಸಹ ಲಸಿಕೆ ಪಡೆದುಕೊಳ್ಳುವಂತೆ ಪ್ರೇರಣೆ ಮಾಡುವಂತೆ ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ .ಕೆ ತಿಳಿಸಿದರು.
ಜಿಲ್ಲಾಸ್ಪತ್ರೆಯಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಕೋವಿಡ್ ಲಸಿಕಾ ಉತ್ಸವಕ್ಕೆಚಾಲನೆ ನೀಡಿ ಅವರು ಮಾತನಾಡಿದರು.
ಕೋವಿಡ್ ಲಸಿಕೆ ಪಡೆದರೆ ಎರಡರಿಂದ ಮೂರು ದಿನ ವಿಶ್ರಾಂತಿ ಪಡೆಯಬೇಕು. ಮೈ,ಕೈ ನೋವು, ಜ್ವರ ಬರುತ್ತದೆ. ಕೆಲಸ ಹಾಗೂ ಹಬ್ಬ ಇದೆ ಎಂದು ಲಸಿಕೆ ಪಡೆಯುವ ಕೆಲಸವನ್ನು ಮುಂದೂಡಬೇಡಿ. ಕೋವಿಡ್ ಯಾವ ರೀತಿ, ಯಾವ ಸಮಯದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಹೆಚ್ಚಿನ ಜನರು ಲಸಿಕೆ ಪಡೆಯುವುದರಿಂದ ಹರ್ಡ್ ಇಮ್ಯುನಿಟಿ ಉಂಟಾಗುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎಂದರು.
ಕೋವಿಡ್ ಲಸಿಕೆ ಪಡೆಯುವುದರಿಂದ ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ. ಜಿಲ್ಲೆಯಲ್ಲಿ ಲಸಿಕೆ ಪಡೆದು ಅಡ್ಡ ಪರಿಣಾಮಗಳು ಉಂಟಾಗಿರುವ ಪ್ರಕರಣ ವರದಿಯಾಗಿಲ್ಲ. ಸಾರ್ವಜನಿಕರು ಭಯವಿದ್ದಲ್ಲಿ ಅದರಿಂದ ಹೊರಬಂದು ಧೈರ್ಯದಿಂದ ಲಸಿಕೆ ಪಡೆದುಕೊಳ್ಳಿ ಎಂದು ಹೇಳಿದರು.
ಈಗ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಮಾಸ್ಕ್ ಧರಿಸುತ್ತಿಲ್ಲ. ಜಿಲ್ಲೆಯಲ್ಲಿ ಪ್ರತಿದಿನ ಅಂದಾಜು 46,000/- ದಂಡ ಸಂಗ್ರಹಿಸಲಾಗುತ್ತಿದೆ. ಸಾರ್ವಜನಿಕರ ಆರೋಗ್ಯ ಕಾಪಾಡುವುದು ಜಿಲ್ಲಾಡಳಿತದ ಉದ್ದೇಶವಾಗಿದೆ.
ಸ್ಥಳೀಯ ಸಂಸ್ಥೆಗಳ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆಯ ತಂಡ ರಚಿಸಿ, ಜನದಟ್ಟಣೆ ಪ್ರದೇಶದಲ್ಲಿ ಮಾಸ್ಕ್ ಧರಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಜನರು ಮಾಸ್ಕ್ ಧರಿಸದಿದ್ದಲ್ಲಿ, ಸರ್ಕಾರದ ನಿಯಮದಂತೆ ದಂಡ ವಿಧಿಸಲಾಗುವುದು ಎಂದರು.
ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕುಗಳಲ್ಲಿ ಕೋವಿಡ್ ಕೇರ್ ಸೆಂಟರ್‌ಗಳನ್ನು ಪ್ರಾರಂಭಿಸಲು ಕ್ರಮ ವಹಿಸಲಾಗಿದೆ.
ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಈ ಹಿಂದಿನ ಒಪ್ಪಂದಂತೆ 600 ಹಾಸಿಗೆಯನ್ನು ಜಿಲ್ಲೆಯ ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಕಾಯ್ದಿರಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.