ರಾಮನಗರ : ಚುನಾವಣೆಯಲ್ಲಿ ಸೋತ ನಿಖಿಲ್ ಕುಮಾರಸ್ವಾಮಿಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕರೆ ಮಾಡಿ ಧೈರ್ಯ ತುಂಬಿದ್ದಾರೆ. ರಾಮನಗರದಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ವಿರುದ್ಧ ಸೋತಿದ್ದರು.
ನಿಖಿಲ್ ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಡಿಕೆಶಿ: ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಸೋತಿದ್ದರು. ಇದೀಗ ಮತ್ತೊಮ್ಮೆ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ಸತತ ಎರಡು ಸೋಲುಗಳಿಂದ ಕಂಗೆಟ್ಟಿರುವ ನಿಖಿಲ್ ಕುಮಾರಸ್ವಾಮಿಗೆ ಫೋನ್ ಮಾಡುವ ಮೂಲಕ ಡಿಕೆಶಿ ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಇದನ್ನೂ ಓದಿ: ಲೋಪ ಸರಿಪಡಿಸಿಕೊಂಡು ಜನರ ಧ್ವನಿಯಾಗಿ ಕೆಲಸ ಮಾಡುತ್ತೇವೆ: ಬಸವರಾಜ ಬೊಮ್ಮಾಯಿ
ರಾಜಕೀಯದಲ್ಲಿ ನಿನಗೆ ಭವಿಷ್ಯವಿದೆ : ನೀನು ಎರಡು ಬಾರಿ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದೀಯ. ನಿನಗೆ ರಾಜಕೀಯ ಕುಟುಂಬದ ಹಿನ್ನಲೆ ಇದೆ. ನನಗೆ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದೇ ಇಷ್ಟು ಎತ್ತರಕ್ಕೆ ಬೆಳೆದಿದ್ದೇನೆ. ಈ ಸೋಲಿನಿಂದ ಕಂಗೆಡಬೇಡ. ಕ್ಷೇತ್ರದಲ್ಲಿ ಓಡಾಟ ನಡೆಸಿ ಜನರೊಂದಿಗೆ ನಿಲ್ಲಬೇಕು. ಸೋಲಿನಿಂದ ಹತಾಶನಾಗಬೇಡ. ರಾಜಕೀಯದಲ್ಲಿ ಏಳು- ಬೀಳು ಸಹಜ. ಮುಂದಿನ ದಿನಗಳಲ್ಲಿ ನಿನಗೆ ರಾಜಕೀಯದಲ್ಲಿ ಭವಿಷ್ಯ ಇದೆ ಎಂದು ಡಿಕೆಶಿ ಅವರು ನಿಖಿಲ್ ಕುಮಾರಸ್ವಾಮಿ ಅವರಿಗೆ ಹಾರೈಸಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಕಾಂಗ್ರೆಸ್‌ಗೆ ಅಧಿಕಾರದ ಚುಕ್ಕಾಣಿ: ಪೊಲೀಸ್ ಇಲಾಖೆಯಲ್ಲಿ ನಡೆಯಲಿದೆಯಾ ಮೇಜರ್ ಸರ್ಜರಿ?
ಮತ್ತೆ ಕ್ಷೇತ್ರದಲ್ಲಿ ಎದ್ದು ಓಡುತ್ತೇನೆ ಎಂದ ನಿಖಿಲ್: ''ನನ್ನನ್ನು ಅತ್ಯಂತ ಪ್ರೀತಿಯಿಂದ ಬೆಂಬಲಿಸಿ ಆಶೀರ್ವದಿಸಿದ ರಾಮನಗರ ವಿಧಾನಸಭೆ ಕ್ಷೇತ್ರದ ಮಹಾಜನತೆಗೆ ನನ್ನ ಶಿರಸಾಷ್ಟಾಂಗ ನಮನಗಳು. ಈ ಒಂದು ಸೋಲು ನಿಮ್ಮ ಸೇವೆ ಮಾಡಬೇಕು ಎನ್ನುವ ನನ್ನ ಅದಮ್ಯ ಸಂಕಲ್ಪಕ್ಕೆ ತಡೆ ಒಡ್ಡಲಾರದು. ನಾನೆಂದೂ ನಿಮ್ಮ ಜತೆಯಲ್ಲೇ ಇರುತ್ತೇನೆ. ನಿಮಗಾಗಿ ಜೀವಿಸುತ್ತೇನೆ. ಸೋಲನ್ನು ಸಮಚಿತ್ತದಿಂದ ಸ್ವೀಕರಿಸಿ ಮುನ್ನಡೆಯುತ್ತೇನೆ. ಅದು ನಾನು ನನ್ನ ಪೂಜ್ಯ ತಾತನವರಾದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಸಾಹೇಬರಿಂದ, ತಂದೆ ಹೆಚ್ ಡಿ ಕುಮಾರಸ್ವಾಮಿ ಅವರಿಂದ ಕಲಿತ ಪಾಠ ಮತ್ತೆ ಎದ್ದು ಓಡುತ್ತೇನೆ. ಬಿದ್ದ ಮಗುವನ್ನು ಮೇಲೆತ್ತುವ ನಿಮ್ಮ ಪ್ರೀತಿ, ವಾತ್ಸಲ್ಯವನ್ನು ನಾನು ಬಲ್ಲೆ.
ಇದನ್ನೂ ಓದಿ: 'ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗಲಿ'.. ವಿಶೇಷ ಪೂಜೆ ಸಲ್ಲಿಸಿದ ಕುರುಬ ಸಮುದಾಯ
ಜನರಿಂದ ದೂರವಾಗುವ ಜಾಯಮಾನ ನಮ್ಮದಲ್ಲ: ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಜಾತ್ಯತೀತ ಜನತಾದಳವನ್ನು ಬೆಂಬಲಿಸಿದ ಸಾರ್ವಜನಿಕ ಬಂಧುಗಳನ್ನು ಇಲ್ಲಿ ಸ್ಮರಿಸುತ್ತೇನೆ. ಸೋಲಿನಿಂದ ಕಂಗೆಟ್ಟು ಜನರಿಂದ ದೂರವಾಗುವ ಜಾಯಮಾನ ನಮ್ಮದಲ್ಲ. ಈ ಪರಾಜಯದಿಂದ ಪಾಠ ಕಲಿಯುತ್ತೇವೆ. ಪುನಃ ಪುಟಿದೆದ್ದು ಬರುತ್ತೇವೆ. ಪ್ರತಿಯೊಬ್ಬರಿಗೂ ಪ್ರಣಾಮಗಳು'' ಎಂದು ಸೋಲಿನ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿ ಫೇಸ್ಬುಕ್ನಲ್ಲಿ ಬರೆದಿದ್ದಾರೆ.
ಇದನ್ನೂ ಓದಿ: 135 ಸ್ಥಾನಗಳೇ ನನಗೆ ರಾಜ್ಯದ ಜನರು ನೀಡಿದ ಜನ್ಮದಿನದ ಬಹುದೊಡ್ಡ ಗಿಫ್ಟ್: ಡಿ.ಕೆ.ಶಿವಕುಮಾರ್