ರಾಮನಗರ: ಟೋಯೋಟಾ ಕಿರ್ಲೋಸ್ಕರ್ ಕಂಪನಿ ಕೊಡುಗೆಯಾಗಿ ನೀಡಿರುವ ಅತ್ಯಾಧುನಿಕ ಸಿಟಿ ಸ್ಕ್ಯಾನ್ ಯಂತ್ರವನ್ನು ಜಿಲ್ಲಾಸ್ಪತ್ರೆಯಲ್ಲಿ ಅಳವಡಿಸಲಾಗಿದ್ದು, ಇದನ್ನು ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ಇಂದು ಲೋಕಾರ್ಪಣೆ ಮಾಡಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಮನಗರ ಜಿಲ್ಲಾಸ್ಪತ್ರೆಯನ್ನು ತಾಂತ್ರಿಕವಾಗಿ ಸಾಕಷ್ಟು ಅಭಿವೃದ್ಧಿಪಡಿಸಲಾಗಿದೆ. ಇದಕ್ಕೆ ಹೊಸದಾಗಿ ಸಿಟಿ ಸ್ಕ್ಯಾನ್ ಯಂತ್ರವನ್ನು ಸೇರ್ಪಡೆ ಮಾಡಲಾಗಿದೆ. ಇದನ್ನು ಸಿಎಸ್‌ಆರ್ ನಿಧಿಯಡಿ ಆಸ್ಪತ್ರೆಗೆ ಕೊಡುಗೆಯಾಗಿ ನೀಡಿದ ಟೊಯೋಟಾ ಕಿರ್ಲೋಸ್ಕರ್ ಕಂಪನಿಗೆ ಅಭಿನಂಧಿಸಿದರು.
ಹೈಟೆಕ್ ಡಯಾಗ್ನಾಸ್ಟಿಕ್ ಕೇಂದ್ರ:
ರಾಮನಗರ ಜಿಲ್ಲಾ ಕೇಂದ್ರದಲ್ಲಿ ಎಲ್ಲಾ ರೋಗಗಳನ್ನು ಪತ್ತೆ ಹಚ್ಚಬಲ್ಲ ಹೈಟೆಕ್ ಡಯಾಗ್ನಾಸ್ಟಿಕ್ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಿಲಾಗಿದೆ. ಜಿಲ್ಲೆಯ ಜನರು ಆರೋಗ್ಯ ಪರೀಕ್ಷೆಗಾಗಿ ಬೆಂಗಳೂರಿಗೆ ಹೋಗಬೇಕಾಗಿಲ್ಲ. ಇಲ್ಲಿಯೇ ಪರೀಕ್ಷೆ ಮಾಡಿಸಿಕೊಂಡು ಇಲ್ಲಿಯೇ ಚಿಕಿತ್ಸೆ ಪಡೆಯಲು ಅನುಕೂಲವಾಗುವಂತೆ ಮಾಡಲಾಗುತ್ತಿದೆ. ಇದಕ್ಕೆ ಪೂರಕವಾಗಿ ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆ ಸೇರಿದಂತೆ ಸಮುದಾಯ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೂ ಅತ್ಯುತ್ತಮ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ರಾಮನಗರ ಜಿಲ್ಲೆಯೂ ಆರೋಗ್ಯ ಮೂಲಭೂತ ಕ್ಷೇತ್ರದಲ್ಲಿ ಅತ್ಯುತ್ತಮ ಜಿಲ್ಲೆಯಾಗಿ ಹೊರ ಹೊಮ್ಮಲಿದೆ ಎಂದರು.
ಓದಿ: ದೇವನಹಳ್ಳಿಯಲ್ಲಿ ನಿರಂತರ ಮಳೆ; ರೈಲ್ವೆ ಅಂಡರ್ಪಾಸ್ನಲ್ಲಿ ಸಿಲುಕಿದ ವಾಹನಗಳು..
ಇದರ ಜೊತೆಗೆ ಜಿಲ್ಲೆಯಲ್ಲಿ ಶಿಕ್ಷಣ, ಮೂಲಸೌಕರ್ಯ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಅನೇಕ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೆ ಜಲಜೀವನ್ ಮಿಷನ್ ಮೂಲಕ ಪ್ರತಿ ಮನೆಗೂ ನದಿಮೂಲದಿಂದ ಶುದ್ಧ ಕುಡಿಯುವ ನೀರನ್ನು ಒದಗಿಸಿಲಾಗುತ್ತಿದೆ ಎಂದು ಡಿಸಿಎಂ ಹೇಳಿದರು.