ರಾಮನಗರ: ಲಭ್ಯವಿರುವ ಜಲ ಮೂಲಗಳಿಂದ ಶಾಶ್ವತ ಶುದ್ಧ ಕುಡಿಯುವ ನೀರನ್ನು ಜಿಲ್ಲೆಯಲ್ಲಿರುವ ಗ್ರಾಮೀಣ ಭಾಗದ ಎಲ್ಲಾ ಮನೆಗಳಿಗೂ ಪೂರೈಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.
ವಿವಿಧ ಕಾಮಗಾರಿಗಳನ್ನು ವೀಕ್ಷಿಸಿ ಕಣ್ವ ಜಲಾಶಯದ ಬಳಿ ಮಾತನಾಡಿದ ಅವರು, ಕೋವಿಡ್ ಮತ್ತು ಅತಿವೃಷ್ಟಿಯ ನಡುವೆಯೂ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿಲ್ಲ. ಇದಕ್ಕೆ ನಿದರ್ಶನ ಎನ್ನುವಂತೆ ಜಿಲ್ಲೆಯ ಗ್ರಾಮೀಣ ಭಾಗದಲ್ಲಿರುವ ಎಲ್ಲಾ ಮನೆಗಳಿಗೂ ಶುದ್ಧ ನೀರನ್ನು ಪೂರೈಸುವ 250 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಕಾಮಗಾರಿಗಳು ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿರುವುದೇ ಸಾಕ್ಷಿ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಗ್ರಾಮೀಣ ಕುಡಿಯುವ ನೀರಿನ ಕಾಮಗಾರಿಗೆ ಆದ್ಯತೆ ನೀಡಿ ವಿವಿಧ ಕಾಮಗಾರಿಗಳನ್ನು ಚುರುಕುಗೊಳಿಸಲಾಗಿದೆ.
ಅದರಲ್ಲೂ ಪ್ರಮುಖವಾಗಿ 210 ಕೋಟಿ ರೂ. ವೆಚ್ಚದಲ್ಲಿ ಕೋಡಿಹಳ್ಳಿ ಹಾಗೂ ಇತರೆ 299 ಹಳ್ಳಿಗಳಿಗೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಮಾಡಲಾಗುತ್ತಿದೆ. 4 ಕೋಟಿ ರೂ.ಗಳ ವೆಚ್ಚದಲ್ಲಿ ಸಾತನೂರು ಹಾಗೂ ಇತರೆ 29 ಹಳ್ಳಿಗಳಿಗೆ ಕುಡಿಯುವ ನೀರಿನ ಸರಬರಾಜು ಯೋಜನೆ ಹಾಗೂ 2 ಕೋಟಿ ರೂ.ಗಳ ವೆಚ್ಚದಲ್ಲಿ ಹಾರೋಹಳ್ಳಿ ಗ್ರಾಮಕ್ಕೆ ಕುಡಿಯುವ ನೀರಿನ ಸರಬರಾಜು ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.