ರಾಮನಗರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಬೇಕಾದರೆ ಜೆಡಿಎಸ್ನೊಂದಿಗೆ ಮೈತ್ರಿ ಅಗತ್ಯವಿದೆ ಎಂದು ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಪ್ರತಿಪಾದಿಸಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ 9 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ರಾಮನಗರ ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್ನೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡರೆ 25 ಸ್ಥಾನಗಳನ್ನು ಗೆಲ್ಲಬಹುದು ಎನ್ನುವುದು ನನ್ನ ವೈಯುಕ್ತಿಕ ಅಭಿಪ್ರಾಯ. ಆದರೆ, ಇದರ ಬಗ್ಗೆ ನಮ್ಮ ಪಕ್ಷದ ವರಿಷ್ಠರು ತೀರ್ಮಾನ ಮಾಡಲಿದ್ದಾರೆ. ಅಲ್ಲದೇ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು, ನಮ್ಮ ಪಕ್ಷದ ಯಾರೇ ಅಭ್ಯರ್ಥಿ ಆದರೂ ಅವರ ಗೆಲುವಿಗೆ ಶ್ರಮಿಸುತ್ತೇವೆ ಎಂದು ಹೇಳಿದರು.
ಅವರಿಬ್ಬರು ವ್ಯಾಪಾರದ ಸ್ನೇಹಿತರು: ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ರಾಜ್ಯದ ಡಿಸಿಎಂ ಡಿ ಕೆ ಶಿವಕುಮಾರ್ ಇಬ್ಬರೂ ಸ್ನೇಹಿತರು. ಇಂಡಿಯಾ ಮೈತ್ರಿ ಕೂಟದ ಅಂಗ ಪಕ್ಷದವರು ಕೂಡಾ. ಇಬ್ಬರ ನಡುವೆ ವ್ಯಾಪಾರ ಸಂಬಂಧ ಇದೆ. ಆದ್ದರಿಂದ ಡಿ.ಕೆ.ಶಿವಕುಮಾರ್ ಇಲ್ಲಿ ಡ್ರಾಮಾ ಮಾಡುತ್ತಿದ್ದಾರೆ. ಇವರಿಂದ ಜಿಲ್ಲೆ ಮತ್ತು ರಾಜ್ಯದ ಅಭಿವೃದ್ಧಿ ನಿರೀಕ್ಷಿಲು ಸಾಧ್ಯವೇ, ರಾಜ್ಯದ ಕಾಳಜಿ ಇದ್ದಿದ್ದರೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರಲಿಲ್ಲ ಎಂದರು.
ಮಾಜಿ ಸಚಿವ ಡಾ ಸಿ ಎನ್ ಅಶ್ವತ್ಥನಾರಾಯಣ ಮಾತನಾಡಿ, ನರೇಂದ್ರ ಮೋದಿ ಅವರ ಕಳೆದ 9 ವರ್ಷಗಳಲ್ಲಿ ಇಡೀ ದೇಶದಲ್ಲಿ ಹಲವು ಸಾಧನೆಗಳನ್ನು ಮಾಡಿದ್ದಾರೆ. ಮೋದಿ ಅವರ ಅಭಿವೃದ್ಧಿ ಸಾಧನೆಗಳನ್ನು ಪ್ರತಿ ಮನೆಗೂ ತಲುಪಿಸುವ ಕೆಲಸ ಆಗಲಿದೆ. ರಾಮನಗರ ಜಿಲ್ಲೆಯಲ್ಲಿ ಕುಡಿಯುವ ನೀರು, ರಸ್ತೆ ಅಭಿವೃದ್ಧಿ, ಕೈಗಾರಿಕೆ, ರೇಷ್ಮೆ, ಹೈನುಗಾರಿಕೆಗೆ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡಲಾಗಿದೆ. ಕೆಂಗಲ್ ಹನುಂತಯ್ಯ ಹೆಸರಿನಲ್ಲಿ ರಾಜೀವ್ ಗಾಂಧಿ ಹೆಲ್ತ್ ವಿವಿ ನಿರ್ಮಾಣ ಆಗಲಿದೆ ಎಂದರು.
ಹಾಗೆಯೇ ವಿವಿ ನಿರ್ಮಾಣ ಸಂಬಂಧ 700 ಕೋಟಿ ವೆಚ್ಚದಲ್ಲಿ ರಾಜೀವ್ ಗಾಂಧಿಗೆ ವಿವಿಗೆ ಭೂಮಿ ಪೂಜೆ ಮಾಡಲಾಗಿದೆ. ಶ್ರೀರಂಗ ಯೋಜನೆ, ಕಾವೇರಿ ನೀರಾವರಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕಾಂಗ್ರೆಸ್ ಸರ್ಕಾರ ಬಂದ ನಂತರ ಹಲವು ಅಡೆ ತಡೆಗಳಾಗಿವೆ. ರಾಜೀವ್ ಗಾಂಧಿ ವಿವಿಯ ಮೆಡಿಕಲ್ ಕಾಲೇಜು ಕನಕಪುರಕ್ಕೆ ಶಿಫ್ಟ್ ಮಾಡುತ್ತಿದ್ದಾರೆ. ಕಳ್ಳತನದ ದಾರಿಯಲ್ಲಿ ಕನಕಪುರಕ್ಕೆ ತೆಗೆದುಕೊಂಡು ಹೋಗಲು ಪ್ರಯತ್ನ ಮಾಡುತ್ತಾ ಇದ್ದಾರೆ. ಜಿಲ್ಲೆಯ ಸಹೋದರರು ಮಾಡುತ್ತಿರುವ ಕೆಲಸಕ್ಕೆ ಕನಕಪುರದ ಜನರೇ ಒಪ್ಪುವುದಿಲ್ಲ. ಡಿಕೆ ಶಿವಕುಮಾರ್ ಡಿಸಿಎಂ ಇದ್ದಾರೆ. ಬೇಕಾದರೆ ಕನಕಪುರಕ್ಕೆ ಮತ್ತೊಂದು ಮೆಡಿಕಲ್ ಕಾಲೇಜು ತೆಗೆದುಕೊಂಡು ಹೋಗಲಿ. ಅಧಿಕಾರ ದುರ್ಬಳಕೆ ಮಾಡಿಕೊಳ್ಳುವುದನ್ನ ಜನ ಸಹಿಸಿಕೊಳ್ಳುವುದಿಲ್ಲ ಎಂದು ಹೇಳಿದರು.
ಇನ್ನು ರಾಮಮಂದಿರ ನಿರ್ಮಾಣ ವಿಚಾರವಾಗಿ ಮಾತನಾಡಿದ ಅವರು, ಬಜೆಟ್ನಲ್ಲಿ ನಮ್ಮ ಸರ್ಕಾರ ಘೋಷಣೆ ಮಾಡಿರುವುದನ್ನು ನಿಲ್ಲಿಸಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.
ಇದನ್ನೂ ಓದಿ: ರೈತ ದುಡ್ಡಿಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ ಎನ್ನುವುದು ಅಮಾನವೀಯ: ಬಸವರಾಜ ಬೊಮ್ಮಾಯಿ