ರಾಮನಗರ: ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆಯೇ? ಎಂಬುದರ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ತೀವ್ರ ಚರ್ಚೆ ಶುರುವಾಗಿದೆ. ಮತ್ತೊಂದೆಡೆ ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲವೆಂದು ಯೋಗೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಈಗಾಗಲೇ ರಾಜ್ಯ ಬಿಜೆಪಿ ನಾಯಕರಿಂದ ಅಂತರ ಕಾಯ್ದುಕೊಳ್ಳುತ್ತಿರುವ ಸಿ.ಪಿ. ಯೋಗೇಶ್ವರ್ ಮತ್ತೊಮ್ಮೆ ಮಾತೃ ಪಕ್ಷ ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲು ರಾಮನಗರ ಜಿಲ್ಲೆಯ ಕೆಲ ಪ್ರಮುಖ ಕೈ ನಾಯಕರು ಪ್ರಯತ್ನ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಸ್ತುತ ಸಚಿವ ಸ್ಥಾನ ವಂಚಿತರಾಗಿರುವ ಯೋಗೇಶ್ವರ್ ಸಚಿವ ಸ್ಥಾನಕ್ಕಾಗಿ ಪ್ರಯತ್ನ ಮುಂದುವರಿಸುತ್ತಲೇ ಇದ್ದಾರೆ. ಇನ್ನೊಂದೆಡೆ, ಕಾಂಗ್ರೆಸ್ ನಾಯಕರ ಜೊತೆ ಉತ್ತಮ ಸಂಪರ್ಕ ಬೆಳೆಸುವ ಪ್ರಯತ್ನ ಮಾಡುತ್ತಿದ್ದಾರೆ. ಇದಲ್ಲದೆ ಚನ್ನಪಟ್ಟಣ ಕ್ಷೇತ್ರದಲ್ಲಿ ಯಾರೇ ಕಾಂಗ್ರೆಸ್ ಅಭ್ಯರ್ಥಿ ಮಾಡಿದ್ರು ಕೂಡ ಅವರು ಮೂರನೇ ಸ್ಥಾನಕ್ಕೆ ಬರುವುದು ಖಚಿತ. ಇದರಿಂದ ಜೆಡಿಎಸ್ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ಬಲಿಷ್ಠ ಅಭ್ಯರ್ಥಿ ಎಂದರೆ ಅದು ಕಾಂಗ್ರೆಸ್ ಪಕ್ಷದಿಂದ ಸಿಪಿವೈ ಮಾತ್ರ. ಹೀಗಾಗಿ ರಾಮನಗರ ಜಿಲ್ಲೆಯ ಪ್ರಮುಖ ಕಾಂಗ್ರೆಸ್ ಮುಖಂಡರು ಯೋಗೇಶ್ವರ್ ಅವರನ್ನ ಕಾಂಗ್ರೆಸ್ ಪಕ್ಷಕ್ಕೆ ಕರೆ ತರಲು ಪ್ರಯತ್ನ ಕೂಡ ನಡೆಸುತ್ತಿದ್ದಾರೆ ಎನ್ನಲಾಗ್ತಿದೆ.
'ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ': ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ. ನಾನು ಚುನಾವಣೆಯಲ್ಲಿ ಸೋತರು ಕೂಡ ಎಂಎಲ್ಸಿ ಮಾಡಿ ಸಚಿವ ಸ್ಥಾನ ಕೊಟ್ಟಿದ್ದರು. ಪಕ್ಷಕ್ಕೆ ದ್ರೋಹ ಬಗೆದು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಊಹಾಪೋಹ ವರದಿಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ. ಬಿಜೆಪಿಯಿಂದಲೇ ಸ್ಪರ್ಧಿಸುತ್ತೇನೆ. ಹೆದರಿಕೊಂಡು ಹೋಗುವ ಪ್ರಶ್ನೆಯೇ ಇಲ್ಲವೆಂದು 'ಈಟಿವಿ ಭಾರತ' ದೂರವಾಣಿ ಮೂಲಕ ಸಿಪಿವೈ ಸ್ಪಷ್ಟಪಡಿಸಿದ್ದಾರೆ.