ರಾಮನಗರ : ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರದ ಹೊರವಲಯದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ. ರಾಮನಗರದ ಚಾಮುಂಡೇಶ್ವರಿ ನಗರ ಹರೀಶ್ (26), ಗುಡ್ಡದಹಳ್ಳಿ ಗ್ರಾಮದ 16 ವರ್ಷ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಪ್ರೇಮಿಗಳು.
ಹುಡುಗಿಯ ಮನೆಯಲ್ಲಿ ಆಕೆಗೆ ಬೇರೊಂದು ಹುಡುಗನೊಂದಿಗೆ ಮದುವೆ ಮಾಡಲು ತೀರ್ಮಾನಿಸಿದ್ದ ಕಾರಣದಿಂದ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬಾಲಕಿ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದು, ಹರೀಶ್ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ. ವಿವಾಹ ವಿಚಾರದಲ್ಲಿ ಬಾಲಕಿಯ ಮನೆಯಲ್ಲಿ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗ್ತಿದೆ. ಸ್ಥಳಕ್ಕೆ ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ರಾಮನಗರ ಜಿಲ್ಲಾಸ್ಪತ್ರೆಗೆ ಪ್ರೇಮಿಗಳ ಮೃತದೇಹ ರವಾನೆ ಮಾಡಲಾಗಿದ್ದು, ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ: ಮಾಜಿ ಕಾರ್ಪೊರೇಟರ್ ಮನೆಯಲ್ಲಿ ಗುಂಡಿನ ಸದ್ದು: ಅಣ್ಣ ಗದರಿಸಿದ್ದಕ್ಕೆ ಪಿಸ್ತೂಲ್ ಕೈಗೆತ್ತಿಕೊಂಡ ತಮ್ಮ