ರಾಮನಗರ: ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿ ಮರು ನಿರ್ಮಾಣ ಮಾಡಿರುವ ಸರಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆ ಹಾಗೂ ಸರಕಾರದ ಅನುದಾನದಿಂದ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೊಸದಾಗಿ ನಿರ್ಮಾಣ ಆಗಿರುವ ಸುಸಜ್ಜಿತ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಲೋಕಾರ್ಪಣೆ ಮಾಡಿದರು.
ಸರಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆ:
ಸುಮಾರು 4.28 ಕೋಟಿ ರೂ. ವೆಚ್ಚದಲ್ಲಿ 22 ಕೊಠಡಿಗಳನ್ನು ನಿರ್ಮಾಣ ಮಾಡಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿ ಇಡೀ ಕನ್ನಡ ಮಾದರಿ ಪ್ರಾಥಮಿಕ ಶಾಲೆಗೆ ಜಾಗತಿಕ ಗುಣಮಟ್ಟದ ಸ್ಪರ್ಶ ನೀಡಿದೆ. ಖಾಸಗಿ ಮಾತ್ರವದೇ ಜಾಗತಿಕ ಮಟ್ಟದ ಯಾವ ಶಾಲೆಗೂ ಕಡಿಮೆ ಇಲ್ಲದ ರೀತಿಯಲ್ಲಿ ಸೌಲಭ್ಯಗಳನ್ನು ಕಲ್ಪಿಸಿದೆ.
ಸುಸಜ್ಜಿತ ಲ್ಯಾಬ್, ಅಡುಗೆ ಮನೆ, ಹೈಟೆಕ್ ಗ್ರಂಥಾಲಯ, ಅಂಗನವಾಡಿ ಮಕ್ಕಳಿಗೂ ಒಂದು ಕೊಠಡಿ, ಸ್ಮಾರ್ಟ್ ಕ್ಲಾಸ್ ರೂಮ್ ವ್ಯವಸ್ಥೆ ಮಾಡಲಾಗಿದೆ. ಇಡೀ ಜಿಲ್ಲೆಯಲ್ಲಿ ಅತ್ಯುತ್ತಮ ಸೌಲಭ್ಯಗಳುಳ್ಳ ಸರಕಾರಿ ಶಾಲೆ ಇದಾಗಿದೆ. ಕಂಪನಿಯ ಆಡಳಿತ ಮಂಡಳಿ ತನ್ನ ಸಿಎಸ್‌ಆರ್ ನಿಧಿಯಿಂದ ಈ ಶಾಲೆ ಆಧುನೀಕರಣಗೊಳಿಸಿದೆ.
ಇದೇ ವೆಳೆ ಡಿಸಿಎಂ ಡಾ.ಅಶ್ವತ್ಥನಾರಾಯಣ ಮಾತನಾಡಿ, ಗುಣಮಟ್ಟದ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಟೊಯೋಟಾ ಕಿರ್ಲೋಸ್ಕರ್ ಕಂಪನಿ ನೆರವು ನೀಡಿರುವುದು ಸಂತಸ ಉಂಟು ಮಾಡಿದೆ. ಈ ಭಾಗದ ಮಕ್ಕಳಿಗೆ ಈ ವ್ಯವಸ್ಥೆಯಿಂದ ಹೆಚ್ಚು ಅನುಕೂಲವಾಗಲಿದೆ ಎಂದರು.
ಸರಕಾರಿ ಶಾಲೆ- ಕಾಲೇಜುಗಳನ್ನು ಅತ್ಯುತ್ತಮವಾಗಿ ಅಭಿವೃದ್ಧಿಪಡಿಸಲು ಏನೆಲ್ಲ ಕ್ರಮಗಳನ್ನು ಕೈಗೊಳ್ಳಬೇಕೋ ಅದೆಲ್ಲವನ್ನೂ ಸರಕಾರ ಮಾಡುತ್ತಿದೆ. ಶಿಕ್ಷಣದಿಂದ ಮಾತ್ರ ಸಮಾಜದ ಉನ್ನತಿ ಸಾಧ್ಯ. ಈ ಹಿನ್ನೆಲೆಯಲ್ಲಿ ನಾವು ರಾಷ್ಟ್ರೀಯ ಶಿಕ್ಷಣ ನೀತಿಯನ್ನೂ ಈ ವರ್ಷದಿಂದಲೇ ಜಾರಿ ಮಾಡುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.
ಇದೇ ವೇಳೆ, ನೂತನ ಸರ್ಕಾರಿ ಶಾಲೆಯ ಬಗ್ಗೆ ಶಾಸಕಿ ಅನಿತಾ ಕುಮಾರಸ್ವಾಮಿ ಕೂಡಾ ಪ್ರಶಂಸೆ ವ್ಯಕ್ತಪಡಿಸಿದರು.