ರಾಮನಗರ : ಯೇಸು ಪ್ರತಿಮೆ ನಿರ್ಮಾಣ ವಿರೋಧಿಸಿ ಹಿಂದೂ ಜಾಗರಣ ವೇದಿಕೆ, ಬಿಜೆಪಿ ಹಾಗೂ ಆರ್.ಎಸ್.ಎಸ್ ಕಾರ್ಯಕರ್ತರಿಂದ ಕನಕಪುರ ಚಲೋ ಹಮ್ಮಿಕೊಳ್ಳಲಾಗಿದೆ.
11 ಗಂಟೆಗೆ ಕನಕಪುರದ ಅಯ್ಯಪ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ಜಮಾವಣೆಗೊಳ್ಳಲಿರುವ ಪ್ರತಿಭಟನಾಕಾರರು. 11.30ಕ್ಕೆ ಪ್ರತಿಭಟನಾ ರ್ಯಾಲಿ ಆರಂಭಿಸಿ ಮೆರವಣಿಗೆ ಮೂಲಕ ಟಿ.ಬಿ ಸರ್ಕಲ್ ಬಳಿಗೆ ಬರಲಿದ್ದಾರೆ. ಬಳಿಕ ಮುಖಂಡರಿಂದ ಪ್ರತಿಭಟನಾ ಭಾಷಣ ನಡೆಯಲಿದ್ದು, ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮುಖ್ಯ ಅಥಿತಿಯಾಗಿ ಭಾಗವಹಿಸಲಿದ್ದಾರೆ. ಬಳಿಕ ಕನಕಪುರ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುತ್ತದೆ.
ಪ್ರತಿಭಟನೆಯಲ್ಲಿ ಸುಮಾರು 5 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮಾಜಿ ಸಚಿವ ಸಿ.ಪಿ ಯೋಗೇಶ್ವರ್, ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ರುದ್ರೇಶ್ , ಬಿಜೆಪಿ ಮಾಧ್ಯಮ ವಕ್ತಾರ ಅಶ್ವತ್ ನಾರಾಯಣ್ ಭಾಗಿಯಾಗಲಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ರಾಮನಗರ ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಹಮ್ಮಿಕೊಳ್ಳಲಾಗಿದ್ದು, ಸುಮಾರು ಒಂದು ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ ಕೋಲಾರ, ತುಮಕೂರು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ. ಪ್ರತಿಭಟನೆ ವೇಳೆ ಶಾಂತಿ ಭಂಗ ಮಾಡಿದರೆ ಅಥವಾ ಕಾನೂನು ಉಲ್ಲಂಘನೆ ಮಾಡಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ರಾಮನಗರ ಎಸ್ಪಿ ಡಾ.ಅನೂಪ್ ಎ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.