ರಾಮನಗರ: ಎಸ್ಎಸ್ಎಲ್ಸಿ ಪರೀಕ್ಷೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ಜಿಲ್ಲೆಯಲ್ಲೂ ಕೂಡ ಶಿಕ್ಷಣ ಇಲಾಖೆ ಅಧಿಕಾರಿಗಳು ಪರೀಕ್ಷೆ ನಡೆಸಲು ಪರೀಕ್ಷಾ ಕೇಂದ್ರಗಳಲ್ಲಿ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.
ಪರೀಕ್ಷಾ ಕೇಂದ್ರದ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬಾಕ್ಸ್ ನಿರ್ಮಾಣ ಮಾಡಲಾಗಿದೆ. ಪ್ರತೀ ಕೊಠಡಿಯಲ್ಲಿ 20 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತೀ ಕೊಠಡಿ ಬಳಿ ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಿದ್ದು, ಕೊರೊನಾ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೂಡ ಕೈಗೊಳ್ಳಲಾಗಿದೆ.
ಜಿಲ್ಲೆಯಲ್ಲಿ ಒಟ್ಟು 13,307 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಒಟ್ಟು 57 ಪರೀಕ್ಷಾ ಕೇಂದ್ರಗಳನ್ನ ತೆರೆಯಲಾಗಿದೆ. ಜಿಲ್ಲೆಯ 49 ವಿದ್ಯಾರ್ಥಿಗಳು ರಾಮನಗರ ಜಿಲ್ಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಒಪ್ಪದೆ ಬೇರೆ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಮನಸ್ಸು ಮಾಡಿದ್ದಾರೆ. ಅಂತಹ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಅನುವು ಮಾಡಿಕೊಟ್ಟಿದೆ.