ರಾಮನಗರ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ದಿನದಿಂದ ದಿನಕ್ಕೆ ಹೊಸ ಕಳೆಬರುತ್ತಿದೆ. ಇಂದು ರಾಮನಗರ ಜಿಲ್ಲೆಯಲ್ಲಿ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿತ್ತು. ಕನಕಪುರ ಕ್ಷೇತ್ರದಿಂದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ನಾಮಪತ್ರ ಸಲ್ಲಿಸಿದರು. ಅದೇ ರೀತಿ ರಾಮನಗರದಲ್ಲಿ ಇಕ್ಬಾಲ್ ಹುಸೇನ್, ನಿಖಿಲ್ ಕುಮಾರಸ್ವಾಮಿ, ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಕಾರ್ಯಕರ್ತರೊಂದಿಗೆ ರ್‍ಯಾಲಿ ನಡೆಸಿದ ಡಿಕೆಶಿ: ಕನಕಪುರ ಕ್ಷೇತ್ರದಿಂದ ಡಿಕೆಶಿ ನಾಮಪತ್ರ ಸಲ್ಲಿಸಿದ್ದು, ಇದಕ್ಕೂ ಮುನ್ನ ಕಾರ್ಯಕರ್ತರೊಂದಿಗೆ ಬೈಕ್ ರ್‍ಯಾಲಿ ನಡೆಸಿ ತಮ್ಮ ಶಕ್ತಿ ಪ್ರದರ್ಶನ ಮಾಡಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಮಾತನಾಡಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್, ಬಿಜೆಪಿ, ಜೆಡಿಎಸ್ನ ಅಜೆಂಡಾ ಗೊತ್ತಿಲ್ಲ. ಇಲ್ಲಿ ನೂರಾರು ನಾಯಕರನ್ನು ಹುಟ್ಟು ಹಾಕಿದ್ದೇನೆ. ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಮತ್ತಿತರರು ನಮ್ಮ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅನೇಕ ಸಚಿವರು, ಶಾಸಕರು ನಮ್ಮ ಪಕ್ಷಕ್ಕೆ ಬರಲು ಬಯಸಿದ್ದರು. ಆದರೆ, ಪಕ್ಷದಲ್ಲಿ ಜಾಗವೇ ಇರಲಿಲ್ಲ. ನಾವು 150 ಸ್ಥಾನಗಳನ್ನು ದಾಟುತ್ತೇವೆ ಮತ್ತು ರಾಜ್ಯದಲ್ಲಿ ನಾವೇ ಸರ್ಕಾರ ರಚಿಸುತ್ತೇವೆ ಎಂಬ ವಿಶ್ವಾಸವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚನ್ನಪಟ್ಟಣದಲ್ಲಿ ಹೆಚ್‌ಡಿಕೆ ನಾಮಪತ್ರ ಸಲ್ಲಿಕೆ: ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್‌ಡಿಕೆ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಅಲ್ಲದೇ ಸ್ಥಳೀಯ ಸಾವಿರಾರು ಜೆಡಿಎಸ್ ಮುಖಂಡರು ತಮ್ಮ ನಾಯಕರನ್ನು ಮೆರವಣಿಗೆಯಲ್ಲಿ ಚುನಾವಣಾಧಿಕಾರಿ ಕಚೇರಿಗೆ ಕರೆದುಕೊಂಡು ಹೋದರು. ಭರ್ಜರಿ ಮೆರವಣಿಗೆ ಮಾಡುವ ಮೂಲಕ ಕುಮಾರಸ್ವಾಮಿಗೆ ಬೆಂಬಲ ಸೂಚಿಸಿದರು. ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಮಾಜಿ ಸಿಎಂ ಕುಮಾರಸ್ವಾಮಿ ಹಾಕಿಲ್ ಷಾಹಿ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿದರು. ನಂತರ ಷೇರು ಹೋಟೆಲ್ ಸರ್ಕಲ್ ನಿಂದ ಮೆರವಣಿಗೆ ನಡೆಸಿ ತಾಲೂಕು ಕಚೇರಿ ತನಕ ಬೃಹತ್ ಮೆರವಣಿಗೆ ನಡೆಸಿ ಉಮೇದುವಾರಿಕೆ ಸಲ್ಲಿಕೆ ಮಾಡಿದರು. ಕುಮಾರಸ್ವಾಮಿ ಅವರ ನಾಮಪತ್ರ ಸಲ್ಲಿಕೆ ವೇಳೆ, ಕ್ಷೇತ್ರದ ಪ್ರಮುಖರು ಹಾಜರಿದ್ದರು.
ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ: ಇನ್ನು ರಾಮನಗರ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಿದರು. ಈ ವೇಳೆ ಪುತ್ರನಿಗೆ ಮಾಜಿ ಸಿಎಂ ಹೆಚ್‌ಡಿಕೆ ಹಾಗು ಪತ್ನಿ ಅನಿತಾ ಕುಮಾರಸ್ವಾಮಿ ಸಾಥ್ ನೀಡಿದರು. ಇದಕ್ಕೂ ಮುನ್ನ ಅವರು ರಾಮನಗರದ ಚಾಮುಂಡೇಶ್ವರಿ ಸನ್ನಿದಾನದಲ್ಲಿ ಪೂಜೆ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ನಿಖಿಲ್ ಕುಮಾರಸ್ವಾಮಿ ತಾತ ದೇವೇಗೌಡರ ನಿವಾಸಕ್ಕೆ ತೆರಳಿ, ಅಜ್ಜನ ಆಶೀರ್ವಾದ ಪಡೆದುಕೊಂಡರು. ಅಜ್ಜನ ಭೇಟಿ ಬಳಿಕವೇ ಅವರು ರಾಮನಗರಕ್ಕೆ ಬಂದು ನಾಮಪತ್ರ ಸಲ್ಲಿಸಿದರು.
ಮತ್ತೊಂದು ಕಡೆ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಕೂಡ ಇಂದೇ ತಮ್ಮ ಬೆಂಬಲಿಗರೊಂದಿಗೆ ತಾಲೂಕು ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ವಿಧಾನಸಭೆ ಚುನಾವಣೆ 2023.. ರಾಮನಗರದಲ್ಲಿ ಇಂದು ಘಟಾನುಘಟಿಗಳಿಂದ ನಾಮಪತ್ರ ಸಲ್ಲಿಕೆ