ಶಿವಮೊಗ್ಗ : ಲಾಕ್‍ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟ ಅನುಭವಿಸಿದ್ದ ಕ್ಷೌರಿಕರು ಮತ್ತು ಅಗಸರಿಗೆ 5 ಸಾವಿರ ರೂ. ಅರ್ಥಿಕ ನೆರವು ನೀಡುವ ಯೋಜನೆಯಡಿ ಸಲ್ಲಿಸಿರುವ ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವಂತೆ ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಕುರಿತು ಜಿಲ್ಲಾ ಮಟ್ಟದ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈವರೆಗೆ 370 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಈ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಎರಡು ದಿನಗಳೊಳಗಾಗಿ ವಿಲೇವಾರಿ ಮಾಡಬೇಕು. ಯಾವುದೇ ಕಾರಣಕ್ಕೂ ಅರ್ಜಿ ವಿಲೇವಾರಿ ಮಾಡಲು ವಿಳಂಬ ಮಾಡಬಾರದು. ತಿರಸ್ಕರಿಸಿರುವ ಅರ್ಜಿಗಳ ಕುರಿತು ಸೂಕ್ತ ಕಾರಣಗಳೊಂದಿಗೆ ಮಾಹಿತಿಯನ್ನು ಅರ್ಜಿದಾರರ ಮೊಬೈಲ್ ಸಂಖ್ಯೆಗೆ ಕಳುಹಿಸಬೇಕು ಎಂದು ಅವರು ಹೇಳಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ವಿಶ್ವನಾಥ್ ಅವರು ಮಾತನಾಡಿ, ಅರ್ಹ ಫಲಾನುಭವಿಗಳು ತಾವು ಕೆಲಸ ನಿರ್ವಹಿಸುತ್ತಿರುವ ವ್ಯಾಪ್ತಿಯ ಸೇವಾ ಸಿಂಧು ಕೇಂದ್ರಗಳಲ್ಲಿ, ಸೇವಾ ಸಿಂಧು ಪೋರ್ಟಲ್‍ನಲ್ಲಿ ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಸೂಚಿಸಿರುವ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ನಿಗದಿತ ಅರ್ಜಿ ನಮೂನೆಯೊಂದಿಗೆ ಆಧಾರ್ ಕಾರ್ಡ್ (ಬ್ಯಾಂಕ್ ಖಾತೆಯೊಂದಿಗೆ ಜೋಡಣೆಯಾಗಿರಬೇಕು), ವಿಳಾಸ ದೃಢೀಕರಣ ಪತ್ರ (ಚುನಾವಣಾ ಗುರುತಿನ ಚೀಟಿ/ಡಿಎಲ್/ಪಡಿತರ ಚೀಟಿ), ಮೊಬೈಲ್ ಸಂಖ್ಯೆ, ಅಗಸ/ಕ್ಷೌರಿಕ ವೃತ್ತಿ ಮಾಡುತ್ತಿರುವ ಬಗ್ಗೆ ದೃಢೀಕರಣ ಪತ್ರ ಸಲ್ಲಿಸಬೇಕು. ಜೂನ್ 30 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು ಎಂದರು.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ ಎಲ್ ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಯೋಜನಾ ನಿರ್ದೇಶಕ ಡಾ.ನಾಗೇಂದ್ರ ಹೊನ್ನಳ್ಳಿ ಮತ್ತಿತರರು ಉಪಸ್ಥಿತರಿದ್ದರು.