ಶಿವಮೊಗ್ಗ: ಪ್ರಸ್ತುತ ಮಳೆ ಪ್ರಮಾಣ ಕಡಿಮೆ ಇರುವುದರಿಂದ ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
![traffic](https://etvbharatimages.akamaized.net/etvbharat/prod-images/kn-smg-05-agumbe-ka10011_08072021200223_0807f_1625754743_249.jpg)
ಈ ಹಿಂದೆ ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ-ಉಡುಪಿ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗಿತ್ತು. ಅಲ್ಲದೇ ಆಗುಂಬೆ ಘಾಟಿಯ ರಸ್ತೆಯು ಕಿರಿದಾಗಿರುವುದರಿಂದ, ರಸ್ತೆಯ ಇಕ್ಕೆಲಗಳಲ್ಲಿ ಭಾರ ತಡೆಯುವ ಕ್ಷಮತೆ ಕ್ಷೀಣಿಸುತ್ತಿತ್ತು. ಭಾರಿ ಸರಕು ಸಾಗಣೆ ವಾಹನಗಳು ಸಂಚರಿಸುವುದರಿಂದ ರಸ್ತೆಯ ಬದಿಯ ಮಣ್ಣು ಕುಸಿತ ಉಂಟಾಗಿ ರಸ್ತೆ ಸಂಚಾರಕ್ಕೆ ತೊಂದರೆಯುಂಟಾಗುವ ಸಂಭವ ಹೆಚ್ಚಿತ್ತು. ಅಲ್ಲದೇ ಸಾಕಷ್ಟು ಅಪಘಾತಗಳಿಗೆ ಕಾರಣವಾಗುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಅಧಿಕ ಭಾರದ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಿ ಅಕ್ಟೋಬರ್ 15 ರವರೆಗೆ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥೆ ಮಾಡಲಾಗಿತ್ತು.
ಅಧಿಕ ಮಳೆ ಇದ್ದಾಗ ಭಾರಿ ವಾಹನ ನಿಷೇಧ:
ಇದೀಗ ಮಳೆ ಪ್ರಮಾಣ ಕಡಿಮೆ ಇರುವುದರಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಅಧಿಕ ಮಳೆ ಪ್ರಮಾಣ ಇರುವ ದಿನಗಳಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಮಳೆ ಕಡಿಮೆ ಇರುವ ದಿನಗಳಲ್ಲಿ ಎಲ್ಲಾ ವಾಹನಗಳ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶಿಸಿದ್ದಾರೆ.