ಶಿವಮೊಗ್ಗ: ಸ್ವಾತಂತ್ರೋತ್ಸವದ 75ನೇ ವರ್ಷದ ಅಮೃತ ಮಹೋತ್ಸವವನ್ನು ಸಿಎಂ ಯಡಿಯೂರಪ್ಪ ಅವರ ತವರು ಕ್ಷೇತ್ರ ಶಿಕಾರಿಪುರದಲ್ಲಿ ಆಚರಿಸಲಾಯಿತು.
ಭಾರತಕ್ಕೆ ಸ್ವಾತಂತ್ರ್ಯ ಬಂದು 75ನೇ ಸಂಭ್ರಮಾಚರಣೆಯ ಅಂಗವಾಗಿ ದೇಶದ ವಿವಿಧ ಸ್ಮಾರಕಗಳು, ಹೋರಾಟದ ಸ್ಥಳಗಳಲ್ಲಿ ಅಮೃತ ಮಹೋತ್ಸವ ಆಚರಣೆಗೆ ಭಾರತ ಸರ್ಕಾರ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಶಿಕಾರಿಪುರ ತಾಲೂಕು ಕಚೇರಿ ಎದುರಿನ ಸ್ಮಾರಕ ಸ್ಥಳದಲ್ಲಿ ಸ್ವಾತಂತ್ರೋತ್ಸವದ ನೆನಪಿಗೆ ಕಾರ್ಯಕ್ರಮ ನಡೆಸಲಾಯಿತು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಸ್ಮಾರಕಗಳಿಗೆ ಪುಷ್ಪ ನಮನ ಸಲ್ಲಿಸಿದರು. ನಂತರ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲಾಯಿತು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಮಾ. 12ರಂದು ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಚಾಲನೆ ನೀಡಿದ್ದಾರೆ. ಆಗಸ್ಟ್ನಲ್ಲಿ ಬರುವ ಸ್ವಾತಂತ್ರೋತ್ಸವಕ್ಕೆ 75 ವಾರಗಳಾಗುತ್ತವೆ. ಈ ಹಿನ್ನೆಲೆಯಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದವರನ್ನು ನೆನೆಯುತ್ತಾ ಈ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.