ಶಿವಮೊಗ್ಗ: ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ಅವೈಜ್ಞಾನಿಕ ವರದಿಯನ್ನು ತಿರಸ್ಕರಿಸಲು ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ಬಂಜಾರ ಸಂಘದ ವತಿಯಿಂದ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪನವರಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಮನವಿ ಸಲ್ಲಿಸಲಾಯಿತು.
ಡಾ.ಬಿ ಆರ್ ಅಂಬೇಡ್ಕರ್ ಮತ್ತು ಸಂವಿಧಾನದ ಆಶಯಗಳ ವಿರೋಧವಾಗಿ ನ್ಯಾ.ಎ.ಜೆ ಸದಾಶಿವ ಆಯೋಗ ತಮಗೆ ನೀಡಲಾದ ಮೂಲಭೂತ ಉದ್ದೇಶಗಳನ್ನು ಹಾಗೂ ಆಶಯಗಳನ್ನು ಕಡೆಗಣಿಸಿ ಪರಿಶಿಷ್ಟ ಜಾತಿಯಲ್ಲಿ ಒಡಕು ಉಂಟುಮಾಡಿ, ಒಂದು ಉಪಜಾತಿಯ ಹಿತಾಸಕ್ತಿ ಕಾಪಾಡಲು ಈ ಅವೈಜ್ಞಾನಿಕ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಹೀಗಾಗಿ ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ನ್ಯಾ.ಎ.ಜೆ ಸದಾಶಿವ ಆಯೋಗದ ವರದಿಯನ್ನು ತಿರಸ್ಕರಿಸಲು ಧ್ವನಿ ಎತ್ತಬೇಕೆಂದು ಹಾಗೂ ಯಾವುದೇ ಕಾರಣಕ್ಕೂ ವರದಿಯನ್ನು ಜಾರಿಗೆ ತರಬಾರದು ಎಂದು ಆಗ್ರಹಿಸಿ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಮನವಿ ಸ್ವೀಕರಿಸಿದ ಸಚಿವರು, ಈ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ತೀರ್ಮಾನ ಕೈಗೊಂಡಿಲ್ಲ, ಈ ವಿಷಯದ ಬಗ್ಗೆ ಕೆಲವರು ಗೊಂದಲ ಸೃಷ್ಟಿ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಯಾವುದೇ ಸಮಾಜಕ್ಕೆ ಅನ್ಯಾಯ ಆಗದಂತೆ ಈ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.