ಶಿವಮೊಗ್ಗ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಕೊರೊನಾ ಮಹಾಮಾರಿಯನ್ನು ಲೆಕ್ಕಿಸದೆ ಕಾರ್ಯನಿರ್ವಹಿಸುತ್ತಿದ್ದೇವೆ. ಆದರೆ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ. ಹಾಗಾಗಿ ಕೂಡಲೇ ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12,000 ರೂ. ಗೌರವಧನ ಖಾತರಿಪಡಿಸಬೇಕು ಹಾಗೂ ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಅಗತ್ಯವಿರುವಷ್ಟು ಸುರಕ್ಷತಾ ಸಾಮಗ್ರಿಗಳನ್ನು ನೀಡಬೇಕು ಎಂದು ಆಗ್ರಹಿಸಿದರು.
ಅಲ್ಲದೆ ಕೊರೊನಾ ವೈರಸ್ಗೆ ತುತ್ತಾದ ಆಶಾ ಕಾರ್ಯಕರ್ತೆಯರಿಗೆ ಪರಿಹಾರ ಹಾಗೂ ಸಂಪೂರ್ಣ ಚಿಕಿತ್ಸೆ ನೀಡಬೇಕು ಎಂದು ಸರ್ಕಾರಕ್ಕೆ ಹತ್ತು ಬಾರಿ ಮನವಿ ಸಲ್ಲಿಸಿದ್ದೇವೆ. ಆದರೂ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕೇಂದ್ರದಿಂದ 4 ಹಾಗೂ ರಾಜ್ಯ ಸರ್ಕಾರದಿಂದ 2 ಸಾವಿರ ರೂ. ಒಟ್ಟು 6 ಸಾವಿರ ರೂ. ಗೌರವಧನದಲ್ಲಿ ಜೀವನ ಸಾಗಿಸಲು ಕಷ್ಟ ಆಗುತ್ತಿದೆ. ಹಾಗಾಗಿ ಸರ್ಕಾರ ನಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿ ಜಿಲ್ಲಾ ಪಂಚಾಯತ್ ಸಿಇಒಗೆ ಮನವಿ ಸಲ್ಲಿಸಲಾಯಿತು.