ಶಿವಮೊಗ್ಗ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಕೆಲ ಮಧ್ಯವರ್ತಿಗಳಿಂದಾಗಿ ತಲುಪದಿರುವುದು ವಿಷಾದನೀಯ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಅಂತ್ಯೋದಯ ಪಂಚಾಯತ್ ರಾಜ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಿಗೆ ವಿವಿಧ ಯೋಜನೆಗಳ ರಾಜ್ಯಮಟ್ಟದ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಗ್ರಾಮಗಳಲ್ಲಿ ಇನ್ನೂ ಕಡು ಬಡವರಿದ್ದಾರೆ. ಊಟಕ್ಕೆ ತೊಂದರೆ ಆಗುತ್ತಿದೆ ಎಂದರೆ ಅದು ನಮಗೆ ಶೋಭೆ ತರುವುದಿಲ್ಲ.
ಇದಕ್ಕೆ ನೀವು ನಾವುಗಳೇ ಕಾರಣ. ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದಿನವೂ ವಿಶ್ರಾಂತಿ ಪಡೆಯದೇ ದೇಶಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಪ್ರತಿ ತಿಂಗಳು ರಾಜ್ಯಕ್ಕೆ ಬರುತ್ತೇನೆ ಎಂದು ಹೇಳಿದ್ದಾರೆ. ಅವರನ್ನು ಕರೆದು ಕಾರ್ಯಕ್ರಮ ಮಾಡುವುದು ನಮ್ಮ ಸೌಭಾಗ್ಯ ಎಂದು ಹೇಳಿದರು.
ಬಗರ್ ಹುಕುಂ ಸಾಗುವಳಿದಾರರು ಹೆದರುವ ಅವಶ್ಯಕತೆ ಇಲ್ಲ. ನಿಮಗೆ ಅಧಿಕಾರಿಗಳು ನೋಟಿಸ್ ನೀಡಬಹುದು. ನಿಮ್ಮನ್ನು ಒಕ್ಕಲೆಬ್ಬಿಸಲು ನಮ್ಮ ಬಿಜೆಪಿ ಸರ್ಕಾರ ಬಿಡಲ್ಲ ಎಂದು ಸಾಗುವಳಿದಾರರಿಗೆ ಅಭಯ ನೀಡಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ರಾಘವೇಂದ್ರ, ಶಾಸಕರಾದ ಹಾಲಪ್ಪ ಹರತಾಳು, ಕುಮಾರ ಬಂಗಾರಪ್ಪ, ಅಶೋಕ ನಾಯ್ಕ್, ರುದ್ರೇಗೌಡ, ಡಿ.ಎಸ್.ಅರುಣ್ ಸೇರಿದಂತೆ ವಿವಿಧ ನಿಗಮ ಮಂಡಳಿಯ ಅಧ್ಯಕ್ಷರು, ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.
ಇದನ್ನೂ ಓದಿ : ಮೂಲಸೌಕರ್ಯ ಸುಧಾರಿಸದಿದ್ದಲ್ಲಿ ಬೆಂಗಳೂರು ಬಿಡುತ್ತೇವೆ: ಸಿಎಂಗೆ ಐಟಿ ಕಂಪನಿಗಳಿಂದ ಪತ್ರ